ಯುಜಿಡಿ ಕಾಮಗಾರಿಗೆ ಅನುದಾನ ಕೊಡಿ: ಕೇಂದ್ರ ಸಚಿವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಮನವಿ

1
Published on

ಮಂಡ್ಯ: ಮಂಡ್ಯ ನಗರದ ಯು.ಜಿ.ಡಿ ಕಾಮಗಾರಿಗೆ 250 ಕೋಟಿ ರೂ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಹರದೀಪ್‌ಸಿಂಗ್ ಪುರಿ ಅವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮನವಿ ಸಲ್ಲಿಸಿದ್ದಾರೆ.

ದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿರುವ ಚಲುವರಾಯಸ್ವಾಮಿ, ಅಮೃತ್ ಯೋಜನೆಯಡಿ ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ಯುಜಿಡಿ ನಿರ್ಮಾಣಕ್ಕೆ ಅನುದಾನ ಒದಗಿಸಬೇಕು. ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನೊಂದಿಗೆ ಯು.ಜಿ.ಡಿ ನೀರು ಮಿಶ್ರಣವಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ. ಆದ್ದರಿಂದ ಆದ್ಯತೆ ಮೇರೆಗೆ ಕೆಲಸವನ್ನು ಮಾಡಿಕೊಡುವಂತೆ ಕೇಂದ್ರ ಸಚಿವರಲ್ಲಿ ಕೋರಿಕೆ ಸಲ್ಲಿಸಿದ್ದಾರೆ.

ಅಟಲ್ ಮಿಷನ್ ಯೋಜನೆಯಡಿ ಮೊದಲ ಹಂತದಲ್ಲಿ 114.48 ಕೋಟಿ ರೂ ಮಂಜೂರು ಮಾಡಲಾಗಿದೆ. ಅಂತೆಯೇ ಮಂಡ್ಯ ನಗರಸಭೆ ವ್ಯಾಪ್ತಿಯ 35 ವಾರ್ಡ್‌ಗಳ ಪೈಕಿ 12 ವಾರ್ಡ್‌ಗಳಿಗೆ 24*7 ಕುಡಿಯುವ ನೀರು ಸರಬರಾಜು ಕಾಮಗಾರಿ ಪೂರ್ಣಗೊಳಿಸಲಾಗಿದೆ. ಇನ್ನುಳಿದ 23 ವಾರ್ಡ್‌ಗಳಿಗೆ 24*7 ಕುಡಿಯುವ ನೀರು ಸರಬರಾಜು ಕಾಮಗಾರಿ ಕೈಗೊಳ್ಳಲು 100 ಕೋಟಿ ರೂ ಅನುದಾನದ ಅವಶ್ಯಕತೆ ಇರುತ್ತದೆ. ಮಂಡ್ಯ ಬೆಂಗಳೂರು ಮತ್ತು ಮೈಸೂರು ಜಿಲ್ಲೆಯ ಮಧ್ಯದಲ್ಲಿದ್ದು, ಪ್ರಮುಖ ನಗರವಾಗಿರುತ್ತದೆ. ಇಲ್ಲಿ ವಾಸವಾಗಿರುವ ಜನರಿಗೆ ಮೂಲ ವ್ಯವಸ್ಥೆಗಳನ್ನು ಕಲ್ಪಿಸಿಕೊಡುವಂತೆ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net