

ಮದ್ದೂರು: ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ತಾಲೂಕಿನ ವಳಗೆರೆಹಳ್ಳಿ ಗ್ರಾಮದಲ್ಲಿ ಮಳೆಯಿಂದ ಹಾನಿಗೊಳದ ಜಮೀನುಗಳಿಗೆ ಶನಿವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದರು. ತಾಲೂಕಿನಲ್ಲಿ ಮಳೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿಲ್ಲ. ಆದರೂ ಈ ಬಗ್ಗೆ ಅಧಿಕಾರಿಗಳಿಂದ ಸೂಕ್ತ ಮಾಹಿತಿ ಪಡೆದುಕೊಂಡು, ಸಮೀಕ್ಷೆ ನಡೆಸಿ ಹಾನಿಯಾದ ಬೆಳೆಗಳು, ಮನೆಗಳಿಗೆ ಸರ್ಕಾರದಿಂದ ವೈಜ್ಞಾನಿಕ ಪರಿಹಾರ ಕೊಡಿಸಲಾಗುವುದು ಯಾರು ಆತಂಕ ಪಡುವ ಅಗತ್ಯವಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ವಳಗೆರೆಹಳ್ಳಿಯ ಸಮೀಪವಿರುವ ಹೆಬ್ಬಾಳಕ್ಕೆ ಭಾರಿ ಮಳೆ ಬಂದಾಗ ಜಮೀನುಗಳಿಗೆ ನೀರು ನುಗ್ಗಿ ಬೆಳೆಗಳು ನಾಶವಾಗಿ ರೈತರಿಗೆ ಆರ್ಥಿಕವಾಗಿ ನಷ್ಟವಾಗುತ್ತಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಹೆಬ್ಬಾಳದ ನೀರು ಜಮೀನುಗಳಿಗೆ ನುಗ್ಗದಂತೆ ಕ್ರಮ ಕೈಗೊಂಡು ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ನಿಲುವಾಗಿಲು ಗ್ರಾಮದಲ್ಲಿ ಮನೆಯೊಂದಕ್ಕೆ ನೀರು ನುಗ್ಗಿ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಮಳೆ ಬಂದಾಗ ತಂಗು ಪ್ರದೇಶದಲ್ಲಿ ವಾಸ ಮಾಡುವ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಗತ್ಯ ಇರುವ ಕಟ್ಟೆಗಳಲ್ಲಿ ತಡೆಗೋಡೆಗಳು, ಸೇತುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮುಖಂಡರಾದ ಕೆ.ಎಂ.ರವಿ, ಶರತ್ ಇದ್ದರು.