

ಹಾಸನ: ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯ 63.34 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಸಚಿವ ಸಂಪುಟ ಸಭೆಯಲ್ಲಿ ಗುರುವಾರ ಆಡಳಿತಾತ್ಮಕ ಅನುಮೋದನೆ ದೊರಕಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ಸ್ಥಾಪನೆಯನ್ನು ಈ ಹಿಂದೆಯೇ ಆರಂಭಿಸಲಾಗಿತ್ತು. ಆದರೆ ಅಗತ್ಯ ಅನುದಾನ ಕೊರತೆಯಿಂದ ಕಾಮಗಾರಿ ಪೂರ್ಣಗೊಂಡಿರುವುದಿಲ್ಲ. ಹೀಗಾಗಿ ಆಸ್ಪತ್ರೆಗೆ ಬಂದಂತಹ ರೋಗಿಗಳನ್ನು ಮಂಗಳೂರು, ಬೆಂಗಳೂರು ಸೇರಿದಂತೆ ಬೇರೆ ಆಸ್ಪತ್ರೆಗಳಿಗೆ ವರ್ಗಾಯಿಸಲಾಗುತ್ತಿದೆ.
ಇದರಿಂದ ಬಡ ಜನರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ವಿಚಾರವನ್ನು ಹಾಸನ ಜಿಲ್ಲೆ ಸಂಸದರು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ನನ್ನ ಗಮನಕ್ಕೆ ತಂದಿದ್ದರು. ಕೂಡಲೇ ಈ ಸಮಸ್ಯೆಗೆ ಪರಿಹಾರ ನೀಡುವ ಸಂಬಂಧ ನಾನು ಬೆಂಗಳೂರಿಗೆ ಮರಳಿದ ಕೂಡಲೇ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕ ಸೇವೆಗೆ ಒದಗಿಸಲು ಮನವಿ ಮಾಡಿದ್ದೆ. ಮುಖ್ಯಮಂತ್ರಿಗಳು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮನವಿಗೆ ಸ್ಪಂದಿಸಿ, ಈ ವಿಚಾರಕ್ಕೆ ಪರಿಹಾರ ನೀಡಲು ಸೂಚಿಸಿದ್ದಾರೆ ಎಂದರು.
ಕಾಮಗಾರಿಯನ್ನು ಪೂರ್ಣಗೊಳಿಸಲು ಬೇಕಾಗಿರುವ ಹೆಚ್ಚುವರಿ ಮೊತ್ತದ ಮಂಜೂರಾತಿಗಾಗಿ ಸಚಿವ ಸಂಪುಟದ ಮುಂದೆ ತರಲಾಗಿತ್ತು. ಅದರಂತೆ ಈ ಬಗ್ಗೆ ಚರ್ಚೆ ನಡೆಸಿದ ಸಂಪುಟ ಸಭೆ 63.34 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಿದೆ ಎಂದು ವಿವರಿಸಿದರು.
ಹಾಸನ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲೇ ಸಂಪೂರ್ಣವಾಗಿ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.