

ಮಡಿಕೇರಿ: ಹಿಂದುಳಿದ ಆಯೋಗ ಸ್ಥಾಪನೆ, ಭೂ ಸುಧಾರಣೆ ಕಾಯ್ದೆ, ಜನತಾ ನ್ಯಾಯಾಲಯ, ಜೀತ ವಿಮುಕ್ತಿ ಸೇರಿದಂತೆ ಹಲವು ಸಾಮಾಜಿಕ ಕಳಕಳಿಯ ಜನಪರ ಕಾರ್ಯಕ್ರಮಗಳನ್ನು ಜಾರಿ ತಂದ ಮಾಜಿ ಮುಖ್ಯಮಂತ್ರಿ, ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜು ಅರಸು ಅವರು ಜನಮಾನಸದಲ್ಲಿ ಸದಾ ನೆಲೆಸಿರುತ್ತಾರೆ ಎಂದು ಗ್ರಾಹಕರ ವೇದಿಕೆಯ ಮಾಜಿ ಅಧ್ಯಕ್ಷ ಎ.ಲೋಕೇಶ್ ಕುಮಾರ್ ಅವರು ಶ್ಲಾಘಿಸಿದರು.
ಅಹಿಂದ ಒಕ್ಕೂಟ ಮತ್ತು ಸಹಮತ ವೇದಿಕೆಯ ಜಂಟಿ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಾಮಾಜಿಕ ನ್ಯಾಯದ ಹರಿಕಾರ ದಿ.ಡಿ.ದೇವರಾಜು ಅರಸು ಅವರ ೧೦೯ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಕಂಡ ಹಲವು ಮುಖ್ಯಮಂತ್ರಿಗಳಲ್ಲಿ ದಿವಗಂತ ದೇವರಾಜ ಅರಸು ಅವರು ಶ್ರೇಷ್ಠ ಸಾಮಾಜಿಕ ಸುಧಾರಕರಾಗಿದ್ದರು. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅವರ ಅಧಿಕಾರವಧಿಯಲ್ಲಿ ಸಮಾಜದಲ್ಲಿ ಅನೇಕ ಸುಧಾರಣೆಗಳನ್ನು ತಂದರು. ಬಡತನ ನಿರ್ಮೂಲನೆ ಅವರ ಮೊದಲ ಆದ್ಯತೆ. ಅಧಿಕಾರದಲ್ಲಿರುವಾಗ ಸಮಾಜಕ್ಕೆ ಒಳಿತು ಮಾಡುವ ದಿಸೆಯಲ್ಲಿ ಕಾರ್ಯ ನಿರ್ವಹಿಸಿದ ಅರಸು ಅವರು ಜನಮಾನಸದಲ್ಲಿ ಸದಾ ನೆಲೆಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ಎರಡು ಭಾರಿ ಕಾರ್ಯನಿರ್ವಹಿಸಿ ಎಲ್ಲಾ ಜಾತಿ, ಜನಾಂಗದವರನ್ನು ಒಗ್ಗೂಡಿಸುವ ಪ್ರಮುಖ ಕಾರ್ಯಮಾಡಿದ್ದಾರೆ. ಹಿಂದುಳಿದ ಮತ್ತು ಅಲ್ಪಸಂಖ್ಯಾತರಲ್ಲಿ ಆರ್ಥಿಕವಾಗಿ ಸಬಲರಲ್ಲದವರನ್ನು ಶೈಕ್ಷಣಿಕವಾಗಿ ಮುಂದೆ ತರಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಅವಕಾಶ ವಂಚಿತರಿಗೆ ಸಹಾಯವಾಗುವ ನಿಟ್ಟಿನಲ್ಲಿ ಪ್ರೋತ್ಸಾಹಧನ, ಸಮಾಜಮುಖಿ ಕೆಲಸಗಳನ್ನು ಮಾಡಿದ್ದಾರೆ ಎಂದು ಲೋಕೇಶ್ ಕುಮಾರ್ ಬಣ್ಣಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಹಿಂದ ಒಕ್ಕೂಟದ ಸ್ಥಾಪಕರು ಹಾಗೂ ಸಹಮತ ವೇದಿಕೆಯ ಅಧ್ಯಕ್ಷ ಟಿ.ಪಿ.ರಮೇಶ್, ಹಿಂದುಳಿದ ವರ್ಗ, ದುರ್ಬಲ ವರ್ಗ, ಅಲ್ಪಸಂಖ್ಯಾತರ ಏಳಿಗೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ದೇವರಾಜು ಅರಸು ಅವರಿಗೆ ಸಲ್ಲುತ್ತದೆ. ಅಂತಹ ಸಮಾಜ ಸುಧಾರಕರಿಗೆ ಸದಾ ಗೌರವ ಸಲ್ಲಿಸಬೇಕು. ರಾಜಕೀಯ ರಹಿತವಾಗಿ, ಜಾತ್ಯತೀತ ನಿಲುವಿನಲ್ಲಿ ಸರ್ವಧರ್ಮ ಸಮನ್ವಯತೆಯ ಹಾದಿಯಲ್ಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿಯನ್ನು ಕಲ್ಪಿಸಿ ಮಲ ಹೊರುವ ಸಂಪ್ರದಾಯವನ್ನು ರದ್ದು ಮಾಡಿದರು. ೧೬ ಸಾವಿರ ಉದ್ಯೋಗ ಖಾಯಂಗೊಳಿಸಿದರು. ಮೈಸೂರಿಗೆ ಕರ್ನಾಟಕ ಎಂದು ನಾಮಕರಣ ಮಾಡಿ ಸಮಸಮಾಜ ನಿರ್ಮಾಣಕ್ಕೆ ದೊಡ್ಡ ಶಕ್ತಿಯಾಗಿ ಕಾರ್ಯನಿರ್ವಹಿಸಿದರು ಎಂದು ರಮೇಶ್ ತಿಳಿಸಿದರು.
ಕೊಡಗಿನಲ್ಲಿ ಅಹಿಂದ ಒಕ್ಕೂಟ ಅಸ್ತಿತ್ವಕ್ಕೆ ತರುವ ಮೂಲಕ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿ ಅನೇಕ ಸಮಸ್ಯೆಗಳನ್ನು ಪರಿಹರಿಸಿಕೊಂಡು ಬರಲಾಗುತ್ತಿದೆ. ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದಲ್ಲಿ ಹಲವು ಗ್ರಾ.ಪಂ ವ್ಯಾಪ್ತಿಯಲ್ಲಿ ಮನೆ ಕಳೆದುಕೊಂಡವರಿಗೆ ಅದೇ ಗ್ರಾ.ಪಂ ವ್ಯಾಪ್ತಿಯಲ್ಲಿ ಮನೆಯನ್ನು ನಿರ್ಮಿಸಿಕೊಡುವ ಅವಶ್ಯಕತೆ ಇದೆ ಎಂದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಧ್ಯಾಪಕ ಡಾ.ಕೆ.ಎಚ್.ಮುಸ್ತಫ, ಕೊಡವ ಭಾಷಿಕ ಸಮುದಾಯಗಳ ಕೂಟದ ಅಧ್ಯಕ್ಷ ಡಾ.ಸುಭಾಷ್ ನಾಣಯ್ಯ, ವಕೀಲ ಕುಞಬ್ದುಲ್ಲಾ ಮಾತನಾಡಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷ ಎಚ್.ಎಲ್.ದಿವಾಕರ್, ಅಹಿಂದ ಒಕ್ಕೂಟದ ಅಧ್ಯಕ್ಷ ಟಿ.ಎಂ.ಮುದ್ದಯ್ಯ, ಸರ್ಕಾರಿ ನೋಟರಿ ಹಾಗೂ ವಕೀಲರಾದ ಬಿ.ಇ.ಜಯೇಂದ್ರ, ಕೊಡಗು ಜಿಲ್ಲಾ ವಕ್ಫ್ ಸಮಿತಿ ಮಾಜಿ ಅಧ್ಯಕ್ಷ ಕೆ.ಎ.ಯಾಕೂಬ್, ಕೊಡಗು ಜಿಲ್ಲಾ ವಕ್ಫ್ ಸಮಿತಿ ಮಾಜಿ ಅಧ್ಯಕ್ಷ ಎಂ.ಎಚ್.ಅಬ್ದುಲ್ ರೆಹಮನ್ ಹಾಗೂ ವಿವಿಧ ಸಮಾಜಗಳ ಮುಖಂಡರು ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಲಾಯಿತು.