ಮೈಸೂರಿನಲ್ಲಿ ಆ.1 ರಿಂದ 4ರವರೆಗೆ ಸೇನಾ ನೇಮಕಾತಿ ರ್‍ಯಾಲಿ

land reservation soldiers
Published on

ಮೈಸೂರು: ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆ.1 ರಿಂದ 4ರವರೆಗೆ ಹಮ್ಮಿಕೊಂಡಿರುವ ಸೇನಾ ನೇಮಕಾತಿ ರ್‍ಯಾಲಿಗೆ ಆಗಮಿಸುವ ಎಲ್ಲ ಅಭ್ಯರ್ಥಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ನಿರ್ದೇಶನ ನೀಡಿದರು.

ನಗರದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸೇನಾ ನೇಮಕಾತಿ ರ್‍ಯಾಲಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದ 1723 ಅಭ್ಯರ್ಥಿಗಳು ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆಯಲಿರುವ ರ‌್ಯಾಲಿಯಲ್ಲಿ ಭಾಗವಹಿಸಲಿದ್ದು ಎಲ್ಲ ಅಭ್ಯರ್ಥಿಗಳಿಗೆ ನಗರದ ನಂಜರಾಜಬಹದ್ದೂರ್ ಛತ್ರದಲ್ಲಿ ವಾಸ್ತವ್ಯ ವ್ಯವಸ್ಥೆ ಕಲ್ಪಿಸಬೇಕು. ಕ್ರೀಡಾಂಗಣದಲ್ಲಿ ನಾಲ್ಕು ಬಿಎಸ್‌ಎನ್‌ಎಲ್ ಇಂಟರ್ನೆಟ್ ವ್ಯವಸ್ಥೆ ಮತ್ತು ಒಂದು ಸ್ಥಿರ ದೂರವಾಣಿ ವ್ಯವಸ್ಥೆ ಹಾಗೂ ಅಭ್ಯರ್ಥಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಶಿಕ್ಷಕರ ಭವನ ಮತ್ತು ರ್‍ಯಾಲಿ ನಡೆಯಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ತಾತ್ಕಾಲಿಕ ಶೌಚಗೃಹ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಅಭ್ಯರ್ಥಿಗಳನ್ನು ನಂಜರಾಜ ಬಹದ್ದೂರ್ ಛತ್ರದಿಂದ ಚಾಮುಂಡಿ ವಿಹಾರ ಕ್ರೀಡಾಂಗಣಕ್ಕೆ ಕರೆದುಕೊಂಡು ಹೋಗಲು ಮಿನಿ ಬಸ್ ವ್ಯವಸ್ಥೆ ಮಾಡಬೇಕು. ನಂಜರಾಜಬಹದ್ದೂರ್ ಛತ್ರ, ಶಿಕ್ಷಕರ ಭವನ ಮತ್ತು ಚಾಮುಂಡಿ ವಿಹಾರ ಕ್ರೀಡಾಂಗಣದ ಸುತ್ತಮುತ್ತಲಿನ ಪ್ರದೇಶವನ್ನು ಶುಚಿಗೊಳಿಸುವ ಜವಾಬ್ದಾರಿಯನ್ನು ನಗರ ಪಾಲಿಕೆ ಅಧಿಕಾರಿಗಳಿಗೆ ವಹಿಸಿದರು.

ಸೇನಾ ಭರ್ತಿ ನಡೆಯಲಿರುವ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ವೈದ್ಯಕೀಯ ಸೇವೆ, ಆಂಬುಲೆನ್ಸ್ ವ್ಯವಸ್ಥೆ, ಅಗ್ನಿಶಾಮಕ ಸೇವೆ, ಪೊಲೀಸ್ ಬಂದೋಬಸ್ತ್ ಹಾಗೂ ಅಗತ್ಯವಿರುವ ಎಲ್ಲ ಪೂರಕ ಸೌಲಭ್ಯಗಳನ್ನು ಒದಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಭೆಯಲ್ಲಿ ಕರ್ನಲ್ ಗೌರವ್ ತೊಪ್ಪಾ, ಪಾಲಿಕೆ ಉಪ ಆಯುಕ್ತ ಯೋಗಾನಂದ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಮೇಜರ್ ಜೆ.ಆರ್. ಬಾಲಸುಬ್ರಹ್ಮಣ್ಯಂ, ಡಿಪಿಇಒ ಎಸ್. ಸಿದ್ದರಾಜು, ಚಾಮುಂಡೇಶ್ವರಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಗೋವಿಂದರಾಜು, ಶ್ರೀಕಂಠೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net