

ಹನೂರು: ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ಭಾನುವಾರ ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ರಾಮಾಪುರ ಪೊಲೀಸರು ಬಂಧಿಸಿದ್ದಾರೆ. ಕುರಟ್ಟಿ ಹೊಸೂರು ಗ್ರಾಮದ ಕಾಳಶೆಟ್ಟಿ ಬಂಧಿತ.
ಈತ ಮನೆಯಲ್ಲಿ ಅಕ್ರಮವಾಗಿ ಮದ್ಯ ಹಾಗೂ ಗಾಂಜಾ ಮಾರಾಟ ಮಾಡುತ್ತಿದ್ದ. ಈ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಸಬ್ ಇನ್‌ಸ್ಪೆಕ್ಟರ್ ಈಶ್ವರ್ ಹಾಗೂ ಸಿಬ್ಬಂದಿ ತಂಡ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮನೆಯ ಮೇಲೆ ದಾಳಿ ನಡೆಸಲಾಗಿದೆ.
2,700 ಮಿಲಿ ಲೀಟರ್ ಮದ್ಯ ಹಾಗೂ 150 ಗ್ರಾಂ ಒಣ ಗಾಂಜಾವನ್ನು ವಶಪಡಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ನೀಡಲಾಯಿತು. ದಾಳಿಯಲ್ಲಿ ಪೊಲೀಸ್ ಸಿಬ್ಬಂದಿ ಸಿದ್ದೇಶ್ ಕುಮಾರ್, ರಾಜು ಹಾಗೂ ಇತರರು ಇದ್ದರು. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.