

ವಿಜಯಪುರ: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕರವೇ (ನಾರಾಯಣಗೌಡರ ಬಣ) ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು ಕೆಲ ಸಮಯದ ಬಳಿಕ ಬಿಡುಗಡೆಗೊಳಿಸಿದರು.
ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತ ಸೇರಿದಂತೆ ವಿವಿಧೆಡೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಡಳಿತ ಕಚೇರಿಗೆ ಆಗಮಿಸಿದ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು ಎಂದು ಆಗ್ರಹಿಸಿದರು.
ಈ ವೇಳೆ ಪೊಲೀಸ್ ಬ್ಯಾರಿಕೇಡ್ ಸರಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ಕೂಡಲೇ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಜಿಲ್ಲಾಧ್ಯಕ್ಷ ಎಂ.ಸಿ. ಮುಲ್ಲಾ ಮಾತನಾಡಿ, ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ವಾಡಿಕೆಯಂತೆ ಮಳೆ ಆಗಿಲ್ಲ. ಈಗಾಗಲೇ 236 ತಾಲೂಕುಗಳ ಪೈಕಿ 192 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ವಿಶೇಷವಾಗಿ ಕಾವೇರಿ ಕಣಿವೆ ಭಾಗದಲ್ಲಿ ತೀವ್ರ ಸ್ವರೂಪದ ಬರ ಸ್ಥಿತಿ ನಿರ್ಮಾಣವಾಗಿದೆ. ಕೃಷ್ಣರಾಜಸಾಗರ ಜಲಾಶಯದಲ್ಲಿ ಉಳಿದಿರುವುದು ಕೇವಲ 20 ಟಿಎಂಸಿ ನೀರು ಮಾತ್ರ. ಅದರಲ್ಲಿ ಬಳಕೆಗೆ ಸಿಗುವುದು ಕೇವಲ 15 ಟಿಎಂಸಿ ನೀರು ಮಾತ್ರ. ಇಂಥ ಸಂದರ್ಭದಲ್ಲಿ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸುಮಾರು 7 ಟಿಎಂಸಿಯಷ್ಟು ನೀರು ತಮಿಳುನಾಡಿಗೆ ಹರಿಸಲು ಆದೇಶಿಸಿರುವುದು ಆಶ್ಚರ್ಯ ಹಾಗೂ ಆಘಾತಕಾರಿ ಸಂಗತಿ ಎಂದರು.
ಕರವೇ ಪ್ರಧಾನ ಕಾರ್ಯದರ್ಶಿ ಸುರೇಶ ಬಿಜಾಪುರ ಮಾತನಾಡಿ, ಬೆಂಗಳೂರಿಗೆ ಪ್ರತಿ ತಿಂಗಳು ಕುಡಿಯುವ ನೀರಿಗೆ ಒಂದೂವರೆ ಟಿಎಂಸಿ ನೀರು ಬೇಕು. ಕಾವೇರಿ ಕಣಿವೆಯ ರೈತರ ಹೊಲಗದ್ದೆಗಳಿಗೆ ನೀರಿಲ್ಲ. ಕೈಗಾರಿಕೆಗಳಿಗೆ ಕೊಡಬೇಕಾದ ನೀರಿಲ್ಲ. ಹೀಗಿರುವಾಗ ಏಳು ಟಿಎಂಸಿ ನೀರು ಎಲ್ಲಿಂದ ತರಲು ಸಾಧ್ಯ? ಮಂಡ್ಯ ಭಾಗದ ರೈತರು ನೀರಿಗೆ ಏನು ಮಾಡಬೇಕು? ಬೆಂಗಳೂರಿನ ಒಂದೂವರೆ ಕೋಟಿ ಜನರು ಕುಡಿಯುವ ನೀರು ಇಲ್ಲದೆ ಸಾಯಬೇಕೆ? ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ರಾಜ್ಯ ಸರ್ಕಾರ ಯಾವ ಕಾರಣಕ್ಕೂ ಪಾಲಿಸಬಾರದು. ನಾಡಿನ ಜನರ ಜೀವಗಳಿಗಿಂತ ಯಾವುದೋ ಪ್ರಾಧಿಕಾರದ ಆದೇಶ ದೊಡ್ಡದಾಗಲು ಹೇಗೆ ಸಾಧ್ಯ? ಈ ಪ್ರಾಧಿಕಾರದ ಆದೇಶ ಪಾಲಿಸಲು ಹೋಗಿ ಅವರು ಕೇಳಿದಷ್ಟು ನೀರನ್ನು ಬಿಡಲು ಸಾಧ್ಯವಿಲ್ಲ ಎಂದರು.
ಜಿಲ್ಲಾ ಸಂಚಾಲಕ ಎಸ್.ಎಂ. ಮಡಿವಾಳರ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜೈಭೀಮ ಮುತ್ತಗಿ, ನಗರ ಅಧ್ಯಕ್ಷ ಫಯಾಜ್ ಕಲಾದಗಿ, ಮಹಾದೇವ ರಾವಜಿ, ಅಶೋಕ ನಾವಿ, ರಾಜು ಹಜೇರಿ, ದಸ್ತಗೀರ ಸಾಲೋಟಗಿ, ದಯಾನಂದ ಸಾವಳಗಿ, ವಿನೋದ ದಳವಾಯಿ, ಬಸವರಾಜ ಚಪ್ರೆ, ಬಾಳು ಮುಳಜಿ, ಮನೋಹರ ತಾಜವ, ನಿಸಾರ ಬೇಪಾರಿ, ಮನ್ನಾನ ಶಾಬಾದಿ, ಮೈಹಿಬೂಬ ಬೇನೂರ, ರವಿ ಹೂಗಾರ, ರವಿಕಾಂತ ಮುರಗೋಡ, ನಸ್ಸೀಂ ರೋಜಿನ್ದಾರ, ಸಾಧಿಕ ಜಾನ್ವೇಕರ, ದಾದಾಪೀರ ಮುಜಾವರ, ನಿರಂಜನ ಪೂಜಾರಿ, ಬಾಲಕೃಷ್ಣ ಭೋಸಲೆ, ಪ್ರಕಾಶ ತಳವಾರ, ರಾಹುಲ ಗಜಾಕೋಶ, ಹೇಮಂತ ಹಾಡಸಂಗಿ, ಅಕ್ಬರ್ ಅಗಸಿಮನಿ, ಮದರಸಾಬ ಬಡೇಘರ, ಮುತ್ತು ಹೂಗಾರ, ಫಿದಾ ಕಲಾದಗಿ, ಹರೀಶ ಶೆಟ್ಟಿ, ನಬೀರಸೂಲ ಲಾಹೋರಿ, ಅಬೂಬಕರ ಲಾಹೋರಿ ಮತ್ತಿತರರಿದ್ದರು.