

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಎಂಎಲ್‌ಸಿ ಐವನ್ ಡಿಸೋಜಾ ಉಳಿದ ಹತ್ಯೆಗಳ ಪ್ರಕರಣವನ್ನು ಎನ್‌ಐಎಗೆ ಶಿಪಾರಸು ಮಾಡಬೇಕು ಎನ್ನುವ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಹಾಗಾಗಿ ರಾಜ್ಯ ಸರ್ಕಾರವೇ ಎನ್‌ಐಎ ತನಿಖೆಗೆ ಶಿಫಾರಸು ಮಾಡಲಿ ಎಂದು ಬಿಜೆಪಿ ದ.ಕ. ಜಿಲ್ಲಾ ವಕ್ತಾರ ಅರುಣ್.ಜಿ.ಶೇಟ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಯನ್ನು ಬಳಸಿಕೊಂಡು ಹಿಂದು ಕಾರ್ಯಕರ್ತರನ್ನು ಹಣಿಯುವ ಕಾರ್ಯ ಕಾಂಗ್ರೆಸ್ ಸರ್ಕಾರ ನಡೆಸುತ್ತಿದೆ. ಈ ಬಗ್ಗೆ ಮಾಹಿತಿ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಸಭೆ ನಡೆಸಿ ಅನಗತ್ಯವಾಗಿ ಕಿರುಕುಳ ನೀಡುವುದನ್ನು ನಿಲ್ಲಿಸಲು ಆಗ್ರಹಿಸಿದ್ದಾರೆ. ಆದರೆ ಐವನ್ ಡಿಸೋಜಾ ಇದನ್ನು ಪೊಲೀಸರ ಸ್ಥೈರ್ಯ ಕುಗ್ಗಿಸುವ ಕೆಲಸ ಆಗುತ್ತಿದೆ ಎನ್ನುತ್ತಿದ್ದಾರೆ. ಇಂತಹ ಹೇಳಿಕೆ ನೀಡುವ ಮೊದಲು ಈ ಹಿಂದೆ ರಾಜ್ಯಪಾಲರ ವಿರುದ್ದ ಮಾತನಾಡಿರುವ ಬಗ್ಗೆ ಐವನ್ ಸ್ಪಷ್ಟನೆ ನೀಡಲಿ ಎಂದು ಅವರು ಆಗ್ರಹಿಸಿದ್ದಾರೆ.
ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್ ಅಧಿಕಾರಿಯನ್ನು ಗದರಿಸಿ ಮೈಮೇಲೆ ಕೈ ಹಾಕುವ ತನಕ ಹೋಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೃತ್ಯವನ್ನು ಖಂಡಿಸಲಿ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣದಲ್ಲಿ ನಿರಪರಾಧಿಗಳಾದ ಪೊಲೀಸ್ ಅಧಿಕಾರಿಗಳನ್ನು ಅಮಾನುತು ಗೊಳಿಸಿರುವ ಕಾಂಗ್ರೆಸ್ ಸರ್ಕಾರದ ನಡೆಗೆ ಖಂಡನೆ ವ್ಯಕ್ತಪಡಿಸಲಿ ಎಂದು ಅರುಣ್.ಜಿ .ಶೇಟ್ ಆಗ್ರಹಿಸಿದ್ದಾರೆ.