ದುರ್ಬಲ ವರ್ಗದವರ ಧ್ವನಿಯಾಗಿ, ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರವೀಂದ್ರ ಸೂಚನೆ, ಮಾಸಿಕ ಪ್ರಗತಿ ಪರಿಶೀಲನಾ ಸಭೆ

dc meeting
Published on

ಬೆಂಗಳೂರು ಗ್ರಾಮಾಂತರ: ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಅಭಿವೃದ್ಧಿ ಕಾರ್ಯಗಳಿಗಾಗಿಯೇ ಎಸ್‌ಸಿಎಸ್‌ಪಿ ಹಾಗೂ ಟಿಎಸ್‌ಪಿ ಯೋಜನೆಯಲ್ಲಿ ಸಾಕಷ್ಟು ಅನುದಾನ ಮೀಸಲಿಡಲಾಗಿದ್ದು, ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ದುರ್ಬಲ ವರ್ಗದವರ ಧ್ವನಿಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಹೇಳಿದರು.

ದೇವನಹಳ್ಳಿ ತಾಲೂಕು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಅಧಿಕಾರಿಗಳು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದರೆ ಸರ್ಕಾರದ ಪ್ರತಿ ಯೋಜನೆಯೂ ಲಾನುಭವಿಗಳಿಗೆ ತಲುಪುತ್ತದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು. ಸರ್ಕಾರದ ಯೋಜನೆಗಳ ಬಗ್ಗೆ ಅರ್ಹರಿಗೆ ಸರಿಯಾದ ಮಾಹಿತಿ ನೀಡಬೇಕು, ಅರ್ಹರನ್ನು ಸಮರ್ಪಕವಾಗಿ ಗುರುತಿಸಬೇಕು ಎಂದರು.

ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಗ್ರಾಮಾಂತರ ಜಿಲ್ಲೆಯಲ್ಲಿ ಕೈಗೊಂಡಿರುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು, ಲೋಪದೋಷ ಕಂಡುಬಂದರೆ ಅಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶೇ.100 ಬಳಕೆಯಾಗಬೇಕು: ಈಗಾಗಲೇ ಬಿಡುಗಡೆಯಾಗಿರುವ ಅನುದಾನವನ್ನು ಅಭಿವೃದ್ಧಿ ಯೋಜನೆಗಳಿಗೆ ವ್ಯವಸ್ಥಿತವಾಗಿ ಬಳಸಬೇಕು. ಶೇ.100 ಅನುದಾನ ಬಳಕೆಯಾಗುವ ಬಗ್ಗೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ ನಿಗದಿಪಡಿಸಿರುವ ಭೌತಿಕ ಮತ್ತು ಆರ್ಥಿಕ ಗುರಿಯನ್ನು ಪೂರ್ಣವಾಗಿ ಸಾಧಿಸಬೇಕು. ಕೃಷಿ ಯಾಂತ್ರೀಕರಣ ಯೋಜನೆಯಡಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ವಂತಿಕೆ ಸಲ್ಲಿಸುವಂತೆ ಉತ್ತೇಜಿಸಬೇಕು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಾಕಿ ಉಳಿದಿರುವ 2018-19 ನೇ ಸಾಲಿನ ಪಡಿತರ ಚೀಟಿ ವಿತರಣೆ ಕಾರ್ಯವನ್ನು ತ್ವರಿತವಾಗಿ ಪೂರೈಸುವಂತೆ ತಾಕೀತು ಮಾಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಹನುಮಂತರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪುಷ್ಪಾ ಜಿ. ರಾಯ್ಕರ್ ಮತ್ತಿತರರಿದ್ದರು.

ಸರ್ಕಾರ ವಿವಿಧ ಯೋಜನೆಯಡಿ ಅನುದಾನ ಬಿಡುಗಡೆ ಮಾಡುತ್ತದೆ. ಅದನ್ನು ಕೂಡಲೇ ಅಧಿಕಾರಿಗಳು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಲು ಮುಂದಾಗಬೇಕು. ಅರ್ಹರನ್ನು ಗುರುತಿಸಿ, ಸೌಲಭ್ಯ ದೊರಕಿಸಿಕೊಡಬೇಕು. ಪಿ.ಎನ್.ರವೀಂದ್ರ, ಜಿಲ್ಲಾಧಿಕಾರಿ ಬೆಂ.ಗ್ರಾಮಾಂತರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net