ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆಗೆ ಖಂಡನೆ

HN 29-1
Published on

ವಿಜಯಪುರ: ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಖಂಡಿಸಿ ಅಖಿಲ ಭಾರತ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಶುಕ್ರವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಕರೊನಾ ನಿಯಂತ್ರಣಕ್ಕಾಗಿ ಆಶಾ ಕಾರ್ಯಕರ್ತೆಯರು ತಮ್ಮ ಜೀವದ ಹಂಗು ತೊರೆದು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲವು ಕಡೆಗಳಲ್ಲಿ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗಳು ನಡೆಯುತ್ತಿವೆ. ಅವರ ರಕ್ಷಣೆಗೆ ಸರ್ಕಾರ ಮುಂದಾಗಬೇಕು ಹಾಗೂ ಆಶಾ ಕಾರ್ಯಕರ್ತೆಯರ ಮೇಲೆ ದೈಹಿಕ ಹಲ್ಲೆ ಮಾಡಿದವರನ್ನು ಶಿಕ್ಷಿಸಬೇಕು. ಹಲ್ಲೆಗೆ ಒಳಗಾದ ಆಶಾಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕಾರ್ಯಕರ್ತೆಯರು ಒತ್ತಾಯಿಸಿದರು.
ಮಾರ್ಚ್ ತಿಂಗಳಿಂದ ಕೋವಿಡ್-19 ಕಾರ್ಯನಿಯೋಜನೆಯಡಿ ವಿಶೇಷ ಪ್ಯಾಕೇಜ್ ಮೂಲಕ ಮಾಸಿಕ 10 ಸಾವಿರ ರೂ. ಘೋಷಿಸಬೇಕು. ಅಗತ್ಯವಿರುವ ಮಾಸ್ಕ್ ಹಾಗೂ ಸ್ಯಾನಿಟೈಸರ್, ಹ್ಯಾಂಡ್ ಗ್ಲೌಸ್‌ಗಳನ್ನು ನೀಡಬೇಕು. ಕೋವಿಡ್-19 ನಿಂದಾಗಿ ಸಾವಿಗೀಡಾದ ಆಶಾ ಕುಟುಂಬಕ್ಕೆ 50 ಲಕ್ಷ ರೂ. ವಿಮೆ ಸೌಲಭ್ಯವನ್ನು ನೀಡಬೇಕು ಎಂದು ಒತ್ತಾಯಿಸಿದರು. ಸಂಘಟನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ., ಸಂಘಟನೆ ಜಿಲ್ಲಾ ಕಾರ್ಯದರ್ಶಿ ಭಾರತಿ ದೇವಕತೆ, ಸುನೀಲ ಸಿದ್ರಾಮಶೆಟ್ಟಿ ಇನ್ನಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net