ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ

raichur
raichur
Published on

ರಾಯಚೂರು ಆಶಾ ಕಾರ್ಯಕರ್ತೆಯರಿಗೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಸಂಯುಕ್ತ ಕಾರ್ಯಕರ್ತೆಯರ ಸಂಘದ ವತಿಯಿಂದ ನಡೆಸುತ್ತಿರುವ ಅನಿರ್ದಿಷ್ಟ ಧರಣಿ ಗುರುವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ನಗರದ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ಮೂಲಕ ತೆರಳಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸರ್ಕಾರದ ವಿರುದ್ಧ ಘೋಷಣೆ ಹಾಕಿದರು.

ಮುಖ್ಯಮಂತ್ರಿ ಘೋಷಣೆ ಮಾಡಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಪ್ರೋತ್ಸಾಹ ಧನ ಸೇರಿ ಮಾಸಿಕ ಕನಿಷ್ಠ ರೂ.10 ಸಾವಿರ ಗ್ಯಾರಂಟಿಯನ್ನು ಕಳೆದ ಏಪ್ರಿಲ್ ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು. 2025ರ ಮಾರ್ಚ್ ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂ. ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು.

ಆಶಾ ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈ ಬಿಡಬೇಕು, ಯಾವುದೇ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ತೆಗೆಯಬಾರದು. ಅವೈಜ್ಞಾನಿಕ ಆಶಾ ಕಾರ್ಯ ಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕೆಂದು ಮನವಿ ಮಾಡಿದರು.

ಆಶಾ ಸುಗಮಕಾರರನ್ನು ಸೂಕ್ತ ವೇತನ ದೊಂದಿಗೆ ಮುಂದುವರೆಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ದಾಳ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷ ತಿರುಮಲರಾವ್, ಜಿಲ್ಲಾ ಕಾರ್ಯದರ್ಶಿ ಮಹೇಶ ಸಿ, ಎನ್ ಎಸ್ ವೀರೇಶ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಈರಮ್ಮ, ಪ್ರಭಾವತಿ, ಶೈಲಜಾ, ಮಲ್ಲಮ್ಮ, ಶ್ರೀದೇವಿ, ಲಕ್ಷ್ಮೀ, ಗೌರಮ್ಮ, ಈರಮ್ಮ, ಅಣ್ಣಪ್ಪ ಸೇರಿದಂತೆ ಅನೇಕರು ಇದ್ದರು.

 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net