

ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದಲ್ಲಿ ಶುಕ್ರವಾರ ಕಬ್ಬು ಕಟಾವು ಮಾಡುವ ಗ್ಯಾಂಗ್ ಸದಸ್ಯರು ಸ್ಥಳೀಯ ಯುವಕರ ಮೇಲೆ ಹಲ್ಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಶನಿವಾರ 26 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು 12 ಆರೋಪಿಗಳನ್ನು ಬಂಧಿಸಿದ್ದಾರೆ. ಪರಾರಿಯಾಗಿರುವ 14 ಆರೋಪಿಗಳ ಬಂಧನಕ್ಕೆ ತೀವ್ರ ಶೋಧ ನಡೆಸಿದ್ದು, ಟ್ರ್ಯಾಕ್ಟರ್, ಪವರ್ ಜನರೇಟರ್, ಟ್ರಾಲಿ, ಡಾಲ್ಬಿ ವಶಪಡಿಸಿಕೊಂಡಿದ್ದಾರೆ. ದೊಣ್ಣೆಯಿಂದ ಹಲ್ಲೆ ಮಾಡಿದ್ದರಿಂದ ಐವರು ಯುವಕರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಲ್ಲೆ ಕುರಿತ ವಿಡಿಯೋ ತೀವ್ರ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.