

ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು ಖಂಡನೀಯ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಮಾಹಿತಿ ಬಂದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಪೊಲೀಸರಿಗೆ ದಿಟ್ಟತನದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಘಟನೆ ಸಂಬಂಧಿಸಿ ಕೂಲಂಕಷ ತನಿಖೆ ನಡೆಸಲಾಗುತ್ತಿದೆ. ಇದರ ಹಿಂದೆ ಯಾರೇ ಇದ್ದರೂ ಮುಲಾಜಿಲ್ಲದೆ ಬಂಧಿಸಲಾಗುವುದು ಎಂದರು. ಘಟನೆ ಸಂಬಂಧಿಸಿದ ಯಾರೇ ಆಗಲಿ, ಯಾವುದೇ ಧರ್ಮದವರಾಗಲಿ ತಪ್ಪು ಮಾಡಿದರೆ ತಕ್ಕ ಶಿಕ್ಷೆ ನೀಡುವುದಕ್ಕೆ ನಮ್ಮ ಪೊಲೀಸರಿಗೆ ಯಾವುದೇ ಹಿಂಜರಿಕೆಯಿಲ್ಲ. ಮುಂದೆ ಜಿಲ್ಲೆಯಲ್ಲಿ ಇಂತಹ ಘಟನೆ ಮರಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಲಾಗಿದೆ. ಸಂತ್ರಸ್ತ ಯುವತಿಗೆ ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂತ್ರಸ್ತೆಗೆ ಜಿಲ್ಲಾಡಳಿತ ಮಾನಸಿಕ ಧೈರ್ಯ ನೀಡಿದ್ದು, ಎಲ್ಲ ರೀತಿಯ ನೆರವು ನೀಡಲಿದೆ ಎಂದು ಸಚಿವೆ ತಿಳಿಸಿದ್ದಾರೆ.
ಕಾರ್ಕಳ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವತಿ ರಕ್ತ ಪರೀಕ್ಷೆ ವರದಿಯಲ್ಲಿ ಮಾದಕವಸ್ತು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದ್ದು, ಪ್ರಥಮ ಆರೋಪಿ ಅಲ್ತಾಫ್ ಬ್ಲಡ್ ಟೆಸ್ಟ್ ವರದಿ ನೆಗೆಟಿವ್ ಬಂದಿದೆ ಎಂದು ಉಡುಪಿ ಉಡುಪಿ ಎಸ್‌ಪಿ ಡಾ.ಅರುಣ್ ಕುಮಾರ್ ತಿಳಿಸಿದ್ದಾರೆ.
ಬಿಯರ್ ಬಾಟಲ್ ತಂದುಕೊಟ್ಟ ಎರಡನೇ ಆರೋಪಿ ಬ್ಲಡ್ ರಿಪೋರ್ಟ್ ನೆಗೆಟಿವ್ ಬಂದಿದೆ. ಯುವತಿ ಬ್ಲಡ್ ಸ್ಯಾಂಪಲ್‌ನಲ್ಲಿ ಮಾದಕದ್ರವ್ಯ ಪಾಸಿಟಿವ್ ಬಂದಿರುವ ಬಗ್ಗೆ ಆರೋಪಿ ಅಲ್ತಾಫ್‌ನನ್ನು ಕಸ್ಟಡಿಗೆ ತೆಗೆದುಕೊಂಡು ವಿಚಾರಿಸಲಾಗಿದೆ. ಆತ ಕಾರಿನಲ್ಲಿದ್ದ ಒಂದು ಪುಡಿಯನ್ನು ತೋರಿಸಿ, ಅದನ್ನೇ ಆ ಹುಡುಗಿ ತೆಗೆದುಕೊಂಡಿದ್ದು ಎಂದು ಹೇಳಿದ್ದಾನೆ. ಆ ಪುಡಿಯನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿದೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಒಂದು ಪ್ರಕರಣ ದಾಖಲಾಗಿದೆ. ಈ ಡ್ರಗ್ ಎಲ್ಲಿಂದ ಪಡೆದಿದ್ದಾರೆ ಮತ್ತು ಎಲ್ಲಿಂದ ಬಂದಿದೆ ಎನ್ನುವುದರ ಬಗ್ಗೆ ಬಿಎನ್‌ಎಸ್‌ನಲ್ಲಿ ಪ್ರಕರಣ ದಾಖಲಾಗಿದೆ. ನೊಂದ ಯುವತಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡುವುದು ಬಾಕಿ ಇದ್ದು, ಅವರು ಮೆಡಿಕಲ್ ಫಿಟ್ ಆದ ನಂತರ ನ್ಯಾಯಾಂಗದ ಮುಂದೆ ಹಾಜರುಪಡಿಸಿ, ಆದಷ್ಟು ಬೇಗ ಪ್ರಕರಣದ ತನಿಖೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.