ಕ್ರೀಡಾಪಟುಗಳು ಸೋತಾಗ ಕುಗ್ಗಬಾರದು

22sor1
ಸೊರಬದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಕ್ರೀಡಾಕೂಟವನ್ನು ಹುಸೇನ್ ಸರಕಾವಸ್ ಉದ್ಘಾಟಿಸಿದರು. ಟಿ.ಬಾಲಚಂದ್ರ, ಲಿಂಗರಾಜ ಒಡೆಯರ್, ಎಸ್.ರಘುಪತಿ, ಧರ್ಮಪ್ಪ ಇತರರಿದ್ದರು.
Published on

ಸೊರಬ: ಆಟದಲ್ಲಿ ಸೋಲು-ಗೆಲುವು ಸಾಮಾನ್ಯ. ಆದರೆ ಕ್ರೀಡಾಪಟುಗಳಲ್ಲಿ ಸ್ಪರ್ಧಾ ಮನೋಭಾವ ಮುಖ್ಯ ಎಂದು ತಹಸೀಲ್ದಾರ್ ಹುಸೇನ್ ಸರಕಾವಸ್ ಹೇಳಿದರು.

ಪಟ್ಟಣದ ಎಸ್.ಬಂಗಾರಪ್ಪ ಕ್ರೀಡಾಂಗಣದಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಹಮ್ಮಿಕೊಂಡಿದ್ದ 17 ವರ್ಷದೊಳಗಿನ ಪ್ರೌಢಶಾಲೆಗಳ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಅನೇಕ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರವನ್ನು ಪ್ರತಿನಿಧಿಸುವ ಸಾಮರ್ಥ್ಯ ಹೊಂದಿದ್ದಾರೆ. ಅವರನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಸಹಕಾರಿಯಾಗಿವೆ. ಕ್ರೀಡೆಗಳಲ್ಲಿ ಗೆದ್ದವರು ಬೀಗದೆ, ಸೋತವರು ಕುಗ್ಗದೆ ಅನುಭವವೆಂದು ಭಾವಿಸಬೇಕು. ನಿರಂತರ ಅಭ್ಯಾಸ, ಕಠಿಣ ಶ್ರಮಪಡುವ ಕ್ರೀಡಾಪಟು ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡುವುದರಲ್ಲಿ ಸಂದೇಹವಿಲ್ಲ. ಈ ನಿಟ್ಟಿನಲ್ಲಿ ಸರ್ಕಾರವೂ ಸಹಕಾರ ನೀಡುತ್ತದೆ. ಕ್ರೀಡಾಪಟುಗಳು ಉತ್ತಮ ಸಾಧನೆ ಮಾಡುವ ಮೂಲಕ ತಮ್ಮ ಶಾಲೆ ಮತ್ತು ಪಾಲಕರಿಗೆ ಕೀರ್ತಿ ತರಬೇಕು ಎಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ಟಿ.ಬಾಲಚಂದ್ರ ಮಾತನಾಡಿ, ವಿದ್ಯಾರ್ಥಿಗಳು ದೇಶವನ್ನು ಕಟ್ಟುವ ಸತ್ಪ್ರಜೆಗಳಾಗಬೇಕು. ಕ್ರೀಡಾಕೂಟಗಳು ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಸಹಕಾರಿಯಾಗಿದ್ದು, ಕ್ರೀಡಾಪಟುಗಳಲ್ಲಿನ ಪ್ರತಿಭೆ ಮತ್ತು ಸಾಮರ್ಥ್ಯವನ್ನು ಗುರುತಿಸುವ ಕೆಲಸ ಶಿಕ್ಷಕರು, ಪಾಲಕರ ಮೇಲಿರುತ್ತದೆ ಎಂದರು.
ತಹಸೀಲ್ದಾರ್ ಹುಸೇನ್ ಸರಕಾವಸ್ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ತಾಲೂಕು ದೈಹಿಕ ಶಿಕ್ಷಣ ಶಿಕ್ಷಣ ಪರಿವೀಕ್ಷಕ ಲಿಂಗರಾಜ ಒಡೆಯರ್ ಕ್ರೀಡಾಜ್ಯೋತಿ ಸ್ಥಾಪಿಸಿದರು. ತಾಲೂಕು ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಎಸ್.ರಘುಪತಿ, ಕಾರ್ಯದರ್ಶಿ ಧರ್ಮಪ್ಪ, ತಾಲೂಕು ಕಸಾಪ ಅಧ್ಯಕ್ಷ ಶಿವಾನಂದ ಪಾಣಿ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಕಾರ್ಯದರ್ಶಿ ಮಹೇಶ್ ಖಾರ್ವಿ, ಸಮುದಾಯ ಆರೋಗ್ಯಾಧಿಕಾರಿ ಎಚ್.ವೈ.ರಕ್ಷಿತಾ, ದೈಹಿಕ ಶಿಕ್ಷಣ ಶಿಕ್ಷಕರಾದ ಪರಮೇಶ್ವರಪ್ಪ, ಜಯಶ್ರೀ, ವಿನಾಯಕ, ಡಿ.ಕಮಲಾಕರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net