

ಶಿವಮೊಗ್ಗ: ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದವರುನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಕ್ಕೆ ಅನ್ಯ ಕೋಮಿನ ಗುಂಪೊಂದು ಪೊಲೀಸ್ ಠಾಣೆಯ ಎದುರಲ್ಲೇ ಆರ್ಎಸ್ಎಸ್ ಕಾರ್ಯಕರ್ತನನ್ನು ಥಳಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ಪ್ರದೀಪ್ ಎಂದು ತಿಳಿದು ಬಂದಿದ್ದು, ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆ ಎದುರು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಗುಂಪನ್ನು ಚದುರಿಸಿದ್ದಾರೆ.
ಬಕ್ರಿದ್ ಹಬ್ಬದ ಪ್ರಯುಕ್ತ ಗೋವನ್ನು ಹತ್ಯೆ ಮಾಡಿ ಅದರ ಚರ್ಮವನ್ನು ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದ ಗುಂಪೊಂದು ಅದನ್ನು ತಡೆದು ಶಿಕಾರಿಪುರ ಠಾಣಾ ಪೊಲೀಸರ ವಶಕ್ಕೆ ನೀಡಿದೆ.
ವಿಚಾರ ತಿಳಿಯುತ್ತಿದ್ದಂತೆ ಅನ್ಯ ಕೋಮಿನ ಯುವಕರ ಗುಂಪೊಂದು ಪೊಲೀಸ್ ಠಾಣೆ ಎದುರು ಜಮಾಯಿಸಿ ಅಕ್ರಮ ಸಾಗಾಟ ತಡೆದ ಆರ್ಎಸ್ಎಸ್ ಮುಖಂಡನ ಮೇಲೆ ಹಲ್ಲೆ ನಡೆಸಿದೆ. ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.
ಈ ಸಂಬಂಧ ಇದುವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ಧಾರೆ.