ಕೊಲೆ ಯತ್ನ, 5 ವರ್ಷ ಕಠಿಣ ಕಾರಾವಾಸ ಶಿಕ್ಷೆ

dist Court building
ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Published on

ಶಿವಮೊಗ್ಗ: ನಗರದ ಕೋಟೆ ಠಾಣೆ ವ್ಯಾಪ್ತಿಯಲ್ಲಿ ವೈಯಕ್ತಿಕ ದ್ವೇಷದಿಂದ ವ್ಯಕ್ತಿಯೊಬ್ಬರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಚಾಕುವಿನಿಂದ ಬಲ ದವಡೆಗೆ ಚುಚ್ಚಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರಿಗೆ ತಲಾ 5 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು ತಲಾ 15 ಸಾವಿರ ರೂ. ದಂಡ ವಿಧಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ವರ್ಷ ಸಾಧಾ ಕಾರಾವಾಸ ಶಿಕ್ಷೆ ವಿಧಿಸಿ ಆದೇಶಿಸಿದೆ.

ಲಷ್ಕರ್ ಮೊಹಲ್ಲಾದ ಮೊಹಮ್ಮದ್ ನಾಖೇಶ್ ಶಾ ಅಲಿ ಅಲಿಯಾಸ್ ನಖೈ (19) ಮತ್ತು ಅಬು ಸಲೇಹ್ (20) ಶಿಕ್ಷೆಗೆ ಒಳಗಾದವರು. 2019ರ ಸೆ.10ರಂದು ಅದೇ ಏರಿಯಾದ ಮೊಹಮ್ಮದ್ ಯೂಸೂಫ್(50) ಎಂಬುವರಿಗೆ ಕೋಟೆ ಠಾಣೆ ವ್ಯಾಪ್ತಿಯ ಅಲ್ ಹಿಲಾಲ್ ಶಾಲೆ ಹತ್ತಿರ ಚಾಕುವಿನಿಂದ ಚುಚ್ಚಿ ಕೊಲೆಗೆ ಯತ್ನಿಸಿದ್ದರು.
ಅಂದಿನ ತನಿಖಾಧಿಕಾರಿಯಾಗಿದ್ದ ಕೊಟೆ ಠಾಣೆ ಪಿಎಸ್‌ಐಗಳಾದ ಶಿವಪ್ರಸಾದ್ ಮತ್ತು ಕೆ.ಶಿವಾನಂದ್ ಅವರು ನ್ಯಾಯಾಲಯಕ್ಕೆ ದೋಷಾರೋಷಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಾಧೀಶ ಮಂಜುನಾಥ್ ನಾಯಕ್ ಅವರು ಆರೋಪ ಸಾಬೀತಾದ ಹಿನ್ನಲೆಯಲ್ಲಿ ಶುಕ್ರವಾರ ಇಬ್ಬರಿಗೂ ಕಠಿಣ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಎ.ಎಂ.ಸುರೇಶ್‌ಕುಮಾರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net