ಸಿಎಂ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ

23 HANUR 2.
ಹನೂರಿನ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಮಾತನಾಡಿದರು. ಮುಕುಂದವರ್ಮ, ಈಶ್ವರ್, ಬಸವರಾಜು, ಜವಾದ್ ಆಹಮದ್, ಚೇತನ್ ದೊರೆರಾಜು ಇತರರು ಇದ್ದರು.
Published on

ಹನೂರು: ಶ್ರೀ ಮಲೆಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ಸೆ.27ರಂದು ನಡೆಯುವ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಲಿದ್ದು, ಕ್ಷೇತ್ರದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಮಾಜಿ ಶಾಸಕ ಆರ್.ನರೇಂದ್ರ ಮನವಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಶುಕ್ರವಾರ ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಾತನಾಡಿದರು.

ಸೆ.26 ರಂದು ಸಂಜೆ ಹನೂರು ಕ್ಷೇತ್ರಕ್ಕೆ ಆಗಮಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಟ್ಟಣದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ಬಳಿಕ ಮ.ಬೆಟ್ಟಕ್ಕೆ ತೆರಳಿದ್ದಾರೆ. ಈ ವೇಳೆ ಅವರನ್ನು ಸನ್ಮಾನಿಸಲಾಗುವುದು. ಕ್ಷೇತ್ರದ ಅಭಿವೃದ್ಧಿ ಸಂಬಂಧ ಅವರ ಗಮನಕ್ಕೆ ತರಲಾಗುವುದು. ಆದ್ದರಿಂದ ಕಾರ್ಯಕರ್ತರು ಆಯಾ ಗ್ರಾಮಗಳಲ್ಲಿ ಪಕ್ಷದ ಶಿಷ್ಟಾಚಾರದಂತೆ ಸ್ವಾಗತ ಕೋರುವ ಫಲಕಗಳನ್ನು ಅಳವಡಿಸಲು ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ಚುನಾವಣೆಗೆ ಸಜ್ಜಾಗಿ: ಚುನಾವಣೆಯಲ್ಲಿ ಸೋತಿದ್ದರೂ ಜನರ ಕಷ್ಟ ಸುಖಗಳಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ. ಮುಂಬರುವ ತಾಪಂ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಜ್ಜಾಗಬೇಕಿದ್ದು, ಈಗಿನಿಂದಲೇ ಬೂತ್ ಮಟ್ಟದಲ್ಲಿ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.

ನಿಗಮ ಮಂಡಳಿಗೆ ಒಕ್ಕೊರಲಿನ ಒತ್ತಾಯ: ಸತತ 3 ಬಾರಿ ಜಯಗಳಿಸಿರುವ ಆರ್.ನರೇಂದ್ರ ಅವರಿಗೆ ಕಾರಣಗಳಿಂದ ಚುನಾವಣೆಯಲ್ಲಿ ಸೋಲಾಯಿತು. ಆದರೂ ಪಕ್ಷದ ಸಂಘಟನೆಯಲ್ಲಿ ಇವರ ಪಾತ್ರ ಹಿರಿದು. ಆದ್ದರಿಂದ ನರೇಂದ್ರಗೆ ನಿಗಮ ಮಂಡಳಿ ಸ್ಥಾನ ನೀಡಲೇಬೇಕು. ಇಲ್ಲವಾದಲ್ಲಿ ಮುಂಬರುವ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ತೊಡಕಾಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಲಾಗುವುದು ಎಂದು ಕಾರ್ಯಕರ್ತರು ತಿಳಿಸಿದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮುಕುಂದವರ್ಮ, ರಾಮಾಪುರದ ಈಶ್ವರ್, ಮೈಮುಲ್ ನಿರ್ದೇಶಕ ಶಾಹುಲ್ ಆಹಮದ್, ಜಿಪಂ ಮಾಜಿ ಉಪಾಧ್ಯಕ್ಷ ಬಸವರಾಜು, ತಾಪಂ ಮಾಜಿ ಸದಸ್ಯ ಜವಾದ್ ಆಹಮದ್, ಪಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಯೂತ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಚೇತನ್ ದೊರೆರಾಜು, ಮುಖಂಡರಾದ ಚಿಕ್ಕತಮ್ಮಯ್ಯ, ಸಿದ್ದರಾಜು, ಪುಟ್ಟರಾಜು, ಕೃಷ್ಣ, ಮಣ, ಮಾದೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net