

ಮಡಿಕೇರಿ: ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.೧೫ ರಂದು ಬೆಳಗ್ಗೆ ೧೦ ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ನಡೆಯುವ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜುರವರು ಪಾಲ್ಗೊಳ್ಳಲಿದ್ದು, ಕಾರ್ಯಕ್ರಮ ಯಶಸ್ಸಿಗೆ ಎಲ್ಲರೂ ಸಹಕರಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಮನವಿ ಮಾಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ವಿವಿಧ ಸಮಾಜಗಳ ಮುಖಂಡರ ಜತೆ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತ ಸಂವಿಧಾನ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ನಿಟ್ಟಿನಲ್ಲಿ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸಮಾಜದ ಮುಖಂಡರು ಪಾಲ್ಗೊಂಡು ಕಾರ್ಯಕ್ರಮ ಯಶಸ್ಸುಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಮನವಿ ಮಾಡಿದರು.
ಭಾರತ ಸಾರ್ವಭೌಮತ್ವ, ಅಖಂಡತೆ ಮತ್ತು ಏಕತೆಯನ್ನು ಎತ್ತಿ ಹಿಡಿಯುವುದರ ಜತೆಗೆ, ಕಾಪಾಡುವುದು ಪ್ರತಿಯೊಬ್ಬ ಭಾರತೀಯರ ಸಂವಿಧಾನಬದ್ಧ ಮೂಲಭೂತ ಕರ್ತವ್ಯವಾಗಿದೆ. ಆ ನಿಟ್ಟಿನಲ್ಲಿ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಬಿ.ಎನ್.ವೀಣಾ ಹೇಳಿದರು.
ತಾಲೂಕು ಮಟ್ಟದಲ್ಲಿ ತಹಶೀಲ್ದಾರರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಪಾಲ್ಗೊಂಡು ಸಂವಿಧಾನ ಪೀಠಿಕೆ ವಾಚನ ಮಾಡಬೇಕು ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಶೇಖರ್ ಮಾತನಾಡಿ, ಸಂವಿಧಾನ ಪೀಠಿಕೆಯನ್ನು ಓದುವ ಮೂಲಕ ವಿಶೇಷ ಅಭಿಯಾನವನ್ನು ಸೆ.೧೫ ರಂದು ಆಯೋಜಿಸಲಾಗಿದೆ. ಜಿಲ್ಲೆಯಲ್ಲಿ ೫೪ ಸಾವಿರ ಗುರಿಯಲ್ಲಿ ಈಗಾಗಲೇ ೨ ಲಕ್ಷ ಕ್ಕೂ ಹೆಚ್ಚು ಜನರು ನೋಂದಣಿ ಮಾಡಿದ್ದಾರೆ. ಸೆ.೧೫ ರಂದು ಬೆಳಗ್ಗೆ ೧೦ ಗಂಟೆಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂವಿಧಾನ ಪೀಠಿಕೆ ವಾಚನ ಮಾಡಲಿದ್ದಾರೆ. ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.
ಕೊಡಗು ಜಿಲ್ಲೆಯ ೧೦೩ ಗ್ರಾ.ಪಂ.ಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯಕ್ರಮ ನಡೆಯಲಿದೆ. ಸ್ಥಳೀಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಂವಿಧಾನ ಪೀಠಿಕೆ ಓದಬಹುದಾಗಿದೆ. ಸೆ.೧೫ ರ ಬೆಳಗ್ಗೆ ೧೦ ಗಂಟೆ ವರೆಗೂ ಹೆಸರು ನೋಂದಣಿಗೆ ಅವಕಾಶವಿದ್ದು, ನೋಂದಣಿ ಮಾಡದಿರುವವರು ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಿದರು.
ಬುಡಕಟ್ಟು ಕೃಷಿಕರ ಸಂಘದ ಅಧ್ಯಕ್ಷ ಕುಡಿಯರ ಮುತ್ತಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಭಾಗಮಂಡಲ ಲ್ಯಾಂಪ್ ಸೊಸೈಟಿ ಅಧ್ಯಕ್ಷ ಮಿಟ್ಟು ರಂಜಿತ್, ನಾಗರಹೊಳೆ ವನದನ ವಿಕಾಸ ಕೇಂದ್ರದ ಅಧ್ಯಕ್ಷ ಜೆ.ಆರ್.ಪುಷ್ಪ, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಚ್.ಎಲ್.ದಿವಾಕರ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕ ಬಿ.ಬಸಪ್ಪ, ನಗರಸಭೆಯ ಪರಿಸರ ಎಂಜಿನಿಯರ್ ಸೌಮ್ಯ, ಸಣ್ಣ ಉಳಿತಾಯ ಇಲಾಖೆಯ ಸಹಾಯಕ ನಿರ್ದೇಶಕಿ ಸಿಂಧು, ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಸನ್ನ ಇತರರು ಇದ್ದರು.