ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಿ: ಭೋಸರಾಜು

Avoid disruption of drinking water supply Bhosaraju
Published on

ಮಡಿಕೇರಿ:

ಮುಂದಿನ ಆರು ತಿಂಗಳಲ್ಲಿ ಜಿಲ್ಲೆಯ ಗ್ರಾಮೀಣ, ಪಟ್ಟಣ ಹಾಗೂ ನಗರ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಗಮನಹರಿಸಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ನಗರದ ಜಿ.ಪಂ.ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಡಿಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕು. ಜಿಲ್ಲೆಯ ಯಾವ ಭಾಗದಲ್ಲಿಯೂ ಕುಡಿಯುವ ನೀರು ಸರಬರಾಜಿನಲ್ಲಿ ಸಮಸ್ಯೆ ಇದೆ ಎಂದು ಕೇಳಿ ಬರಬಾರದು. ಹಾಗೆಯೇ ಜಾನುವಾರುಗಳಿಗೆ ಅಗತ್ಯ ಮೇವು ಪೂರೈಕೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಬರ ನಿರ್ವಹಣೆಯಲ್ಲಿ ಉದಾಸೀನ ಮಾಡಬಾರದು. ಪಂಚಾಯತ್ ರಾಜ್ ಎಂಜಿನಿಯರ್‍ಗಳು, ತಹಶೀಲ್ದಾರರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಪಿಡಿಒಗಳು ಕುಡಿಯುವ ನೀರು ಪೂರೈಕೆಗೆ ವಿಶೇಷ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಎಚ್ಚರಿಸಿದರು.

ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಸುವ ಕುಂಡಾಮೇಸ್ತ್ರಿ ಯೋಜನೆ ಸಂಬಂಧಿಸಿದಂತೆ ಇನ್ನೂ ಹಸ್ತಾಂತರವಾಗದಿರುವುದು, ಹಾಗೆಯೇ ಮೋಟಾರು ಅಳವಡಿಸುವ ಕಾಮಗಾರಿ ಸಂಬಂಧಿಸಿದಂತೆ 6 ತಿಂಗಳಾದರೂ ಟೆಂಡರ್ ಆಹ್ವಾನಿಸದಿರುವುದಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ತೀವ್ರ ಅತೃಪ್ತಿ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ನಗರಸಭೆ ಸಂಬಂಧಿಸಿದಂತೆ ಸಾಕಷ್ಟು ದೂರುಗಳು ಬರುತ್ತಿದ್ದು, ದೂರು ಬರದಂತೆ ಎಚ್ಚರವಹಿಸಿ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಕುಂಡಾಮೇಸ್ತ್ರಿ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಶಾಸಕರಾದ ಡಾ.ಮಂತರ್ ಗೌಡ ಅವರು ವಿಷಯ ಪ್ರಸ್ತಾಪಿಸಿದರು. ಜಲಜೀವನ್ ಮಿಷನ್ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ಗೆ ಸೂಚಿಸಿದರು.

ಕುಡಿಯುವ ನೀರು ಸಂಬಂಧಿಸಿದಂತೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಶಾಸಕರಾದ ಡಾ|| ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಸುಜಾ ಕುಶಾಲಪ್ಪ, ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಗಮನಸೆಳೆದರು.

ಕೋವಿಡ್ ನಿಯಂತ್ರಣ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರ ಕೈಗೊಳ್ಳಬೇಕು. ಜಿಲ್ಲೆಯ ಗಡಿ ಭಾಗದಲ್ಲಿ ಕೋವಿಡ್ ತಪಾಸಣೆ ಮಾಡಬೇಕು. ಕೋವಿಡ್ ಕಂಡುಬಂದಲ್ಲಿ ಸರ್ಕಾರದ ನಿಯಮದಂತೆ ಹೆಚ್ಚಿನ ಗಮನಹರಿಸಬೇಕು. ಔಷಧಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಸಚಿವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್ ಅವರು ಕೋವಿಡ್ ಸಂಬಂಧ ಅಗತ್ಯ ಮುನ್ನೆಚ್ಚರ ವಹಿಸಲಾಗಿದ್ದು, ಗಡಿ ಪ್ರದೇಶದ ಚೆಕ್ ಪೋಸ್ಟ್‍ಗಳಲ್ಲಿ ಅಗತ್ಯ ತಪಾಸಣೆ ಮಾಡಲಾಗುತ್ತಿದೆ ಎಂದರು.

ಜನರಲ್ ತಿಮ್ಮಯ್ಯ ಪ್ರತಿಮೆ ನಿರ್ಮಾಣ ಸಂಬಂಧ 10 ಲಕ್ಷ ರೂ.ವನ್ನು ಕೆಎಸ್‍ಆರ್‍ಟಿಸಿಯಿಂದ ಭರಿಸಲಾಗುವುದು ಎಂದು ಹೇಳಲಾಗಿತ್ತು. ಈಗ 4 ಲಕ್ಷ ರೂ. ಬಿಡುಗಡೆಯಾಗಿದ್ದು, ಅನುದಾನವನ್ನು ನಗರಸಭೆಗೆ ಹಸ್ತಾಂತರಿಸುವಂತೆ ಶಾಸಕರಾದ ಡಾ.ಮಂತರ್ ಗೌಡ ಅವರು ಸೂಚಿಸಿದರು. ಹೆಚ್ಚುವರಿ ಬಸ್‍ಗಳನ್ನು ನಿಯೋಜಿಸುವಂತೆ ಶಾಸಕದ್ವಯರು ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಕಡಿಮೆ ಮಳೆಯಾಗಿದ್ದು, ಬರ ನಿರ್ವಹಣೆಗೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದೆ. ಈಗಾಗಲೇ ಸರ್ಕಾರದಿಂದ 750 ಲಕ್ಷ ರೂ. ಬಿಡುಗಡೆಯಾಗಿದ್ದು, ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 47 ಕೋಟಿ ರೂ. ಇದೆ. ತಹಶೀಲ್ದಾರರ ಖಾತೆಯಲ್ಲಿಯೂ ಸಹ ಹಣ ಇದೆ ಎಂದು ಮಾಹಿತಿ ನೀಡಿದರು. ಕುಡಿಯುವ ನೀರು ಜೊತೆಗೆ ಜಾನುವಾರುಗಳಿಗೆ ಮೇವು ಪೂರೈಕೆಗೆ ಕ್ರಮವಹಿಸಲಾಗಿದೆ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಜಿ.ಪಂ.ಉಪ ಕಾರ್ಯದರ್ಶಿ ಧನರಾಜ್, ಮುಖ್ಯ ಯೋಜನಾಧಿಕಾರಿ ಝೀವಲ್ ಖಾನ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net