ಕಾರ್ಮಿಕ ರಕ್ಷಣೆ ಬಗ್ಗೆ ಜಾಗೃತಿ

balakarmika jagruthi
Published on

ಮಡಿಕೇರಿ: ಬಾಲ ಹಾಗೂ ಕಿಶೋರ ಕಾರ್ಮಿಕ ರಕ್ಷಣೆ ಹಿನ್ನೆಲೆ ನಗರದ ವಿವಿಧೆಡೆ ತೆರಳಿ ಮಂಗಳವಾರ ತಪಾಸಣೆ ನಡೆಸಿ ಜಾಗೃತಿ ಮೂಡಿಸಲಾಯಿತು.


ಈ ಸಂದರ್ಭ ಜಿಲ್ಲಾ ಕಾರ್ಮಿಕ ಅಧಿಕಾರಿ ಕಾವೇರಿ ಮಾತನಾಡಿ, ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಆ.೩೧ ರವರೆಗೆ ರಕ್ಷಣಾ ಕಾರ್ಯಚರಣೆಯನ್ನು ನಡೆಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ ನೀಡಿದೆ. ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಯಾದ್ಯಂತ ಮಕ್ಕಳ ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗುತ್ತಿದೆ. ಈ ಸಂದರ್ಭದಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರು ಕಂಡುಬಂದಲ್ಲಿ, ಅವರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡಲಾಗುವುದು. ಕೆಲಸಕ್ಕೆ ನಿಯೋಜಿಸಿಕೊಂಡ ಮಾಲೀಕರ ಮೇಲೆ ಕಾನೂನು ಕ್ರಮ ಕೈಗೊಳ್ಳುವುದು ಕಾರ್ಯಾಚರಣೆಯ ಉದ್ದೇಶವಾಗಿರುತ್ತದೆ ಎಂದು ಮಾಹಿತಿ ನೀಡಿದರು.


ಮಂಗಳವಾರ ಮಡಿಕೇರಿ ನಗರದ ಹಳೇ ಖಾಸಗಿ ಬಸ್ ನಿಲ್ದಾಣ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಹೊಸ ಖಾಸಗಿ ಬಸ್ ನಿಲ್ದಾಣ, ಟಾಟಾ ಮೋಟಾರ್ಸ್ ಹಾಗೂ ಇತರೆ ಸಂಸ್ಥೆಗಳಿಗೆ ತೆರಳಿ ತಪಾಸಣೆ ನಡೆಸಲಾಯಿತು. ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿ ಮೂಡಿಸಲಾಯಿತು. ತಪಾಸಣೆ ಸಂದರ್ಭ ಯಾವುದೇ ಬಾಲಕಾರ್ಮಿಕ ಮಕ್ಕಳು ಕಂಡುಬಂದಿರುವುದಿಲ್ಲ ಎಂದು ತಿಳಿಸಿದರು.


ಈ ಸಂದರ್ಭದಲ್ಲಿ ಹಿರಿಯ ಕಾರ್ಮಿಕ ನಿರೀಕ್ಷಕ ಎಂ.ಎಂ.ಯತ್ನಟ್ಟಿ, ಮಹಿಳಾ ಪೊಲೀಸ್ ಹೆಡ್ ಕಾನ್ಸ್‌ಟೀಬಲ್ ಎಸ್.ಜೆ.ಸತ್ಯ, ಮಕ್ಕಳ ಸಹಾಯವಾಣಿ-೧೦೯೮ ಮೇಲ್ವಿಚಾರಕಿ ಬಿ.ಆರ್.ಹರ್ಷಿತ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಒ.ಆರ್.ಡಬ್ಲ್ಯೂ ಪಿ.ಆರ್.ಅಬ್ದುಲ್ ನಿಸಾರ್, ಕೆ.ಎಸ್.ಆರ್.ಟಿ.ಸಿ ಸಂಚಾರಿ ನಿಯಂತ್ರಕ ಸಿ.ಆರ್.ಮಲ್ಲಿಕಾರ್ಜುನ, ನಗರಸಭೆಯ ಆರೋಗ್ಯ ನಿರೀಕ್ಷಕ ಪಿ.ಬಿ.ಸುರೇಶ, ಪ್ರಮುಖರಾದ ಎಂ.ಪಿ.ಉತ್ತಪ್ಪ, ಸಿ.ವಿ.ಶ್ರೀಧರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net