

ದೇವದುರ್ಗ: ಸಂವಿಧಾನ ಬದ್ಧವಾಗಿ ಸಿಕ್ಕಿರುವ ಮತದಾನದ ಹಕ್ಕನ್ನು ಹಿಂಜರಿಯದೆ ಚಲಾಯಿಸಬೇಕು. ಕಡ್ಡಾಯ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ಗೆಲ್ಲಿಸಬೇಕು ಎಂದು ತಾಪಂ ಇಒ ಬಾಬು ರಾಠೋಡ್ ಹೇಳಿದರು.
ನಗರದ ಜೆಪಿ ವೃತ್ತದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಸ್ವೀಪ್ ಸಮಿತಿ, ತಾಪಂ, ಪುರಸಭೆಯಿಂದ ಆಯೋಜಿಸಿದ್ದ ‘ನಮ್ಮ ನಡೆ ಮತದಾನದ ಕಡೆ’ ಜಾಗೃತಿ ಕಾರ್ಯಕ್ರಮದಲ್ಲಿ ಸೋಮವಾರ ಮಾತನಾಡಿದರು. ಜಿಲ್ಲೆಯಲ್ಲಿ ಮೇ 7ರಂದು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಮತದಾನ ಮಾಡಬೇಕೆಂದು ತಿಳಿಸಿದರು.
ಪುರಸಭೆ ಮುಖ್ಯಾಧಿಕಾರಿ ವಿ.ಆರ್.ಬಳ್ಳಾರಿ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮತದಾರರೇ ನಿಜವಾದ ಪ್ರಭುಗಳು. ಪ್ರಜಾಪ್ರಭುತ್ವ ಜೀವಂತವಾಗಿ ಉಳಿಯಬೇಕೆಂದರೆ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು. ಮತದಾನ ನಮಗೆ ಸಂವಿಧಾನಾತ್ಮಕವಾಗಿ ದೊರೆತಿರುವ ಹಕ್ಕು ಆಗಿದ್ದು, ನೆರೆಹೊರೆಯವರಲ್ಲೂ ಮತದಾನದ ಜಾಗೃತಿ ಮೂಡಿಸಿ ಮತ ಚಲಾಯಿಸಲು ಪ್ರೇರೇಪಿಸಬೇಕು. ಧರ್ಮ, ಜಾತಿ, ಭಾಷೆ ಅಥವಾ ಯಾವುದೇ ದಾಕ್ಷಿಣ್ಯಕ್ಕೆ ಒಳಗಾಗದೆ ವಿವೇಚನೆಯಿಂದ ಮತ ಚಲಾಯಿಸಬೇಕು ಎಂದರು. ಬಿಇಒ ಎಚ್.ಸುಖದೇವ್ ಕಡ್ಡಾಯ ಮತದಾನದ ಪ್ರತಿಜ್ಞಾವಿಧಿ ಬೋಧಿಸಿದರು.