

ವಿರಾಜಪೇಟೆ: ಹೃದಯಾಘಾತದ ಚಿಕಿತ್ಸಾ ವಿಧಾನಗಳಲ್ಲಿ ಒಂದಾದ ಹೃದಯ ಶ್ವಾಸಕೋಶದ ಪುನರುಜ್ಜೀವನ ಚಿಕಿತ್ಸೆ (ಸಿಪಿಆರ್) ವಿಧಾನದ ಅರಿವು ಪ್ರತಿಯೊಬ್ಬರಲ್ಲೂ ಇರಬೇಕು ಎಂದು ವಿರಾಜಪೇಟೆಯ ಸೇಂಟ್ ಆನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಅಭಿಪ್ರಾಯಪಟ್ಟರು.
ವಿರಾಜಪೇಟೆಯ ಸೇಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ಯುವ ರೆಡ್‌ಕ್ರಾಸ್ ಹಾಗೂ ಎನ್‌ಎಸ್‌ಎಸ್ ಘಟಕಗಳ ಸಹಯೋಗದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಹೃದಯ ಶ್ವಾಸಕೋಶದ ಪುನರುಜ್ಜೀವನ ಚಿಕಿತ್ಸೆ (ಸಿಪಿಆರ್)ಯ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪ್ರಸ್ತುತ ಜೀವನ ಶೈಲಿಯಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿದ್ದು, ಅದರ ಚಿಕಿತ್ಸಾ ವಿಧಾನದ ಬಗ್ಗೆ ಜಾಗೃತಿ ಮೂಡುವುದು ಅವಶ್ಯಕ. ಸಿಪಿಆರ್ ಸಹಾಯದಿಂದ ಹೃದಯಾಘಾತ ತಡೆಗಟ್ಟಲು ಸಾಧ್ಯ ಎಂದರು.
ಮೈಸೂರು ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ಆದರ್ಶ್ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ನಿಯಮಿತ ಆಹಾರ, ವ್ಯಾಯಾಮ, ಯೋಗ, ದೈಹಿಕ ಚಟುವಟಿಕೆಗಳಿಂದ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೃದಯಾಘಾತ ಸಂಭವಿಸುವ ಸಂದರ್ಭದಲ್ಲಿ ಸಿಪಿಆರ್ ಮಾಡುವುದರಿಂದ ವ್ಯಕ್ತಿಯನ್ನು ಬದುಕಿಸಲು ಸಾಧ್ಯ. ಸಿಪಿಆರ್‌ನ ಜ್ಞಾನ ಪ್ರತಿಯೊಬ್ಬರಿಗೂ ಅತ್ಯವಶ್ಯಕ ಎಂದರು.
ಸಭಾ ಕಾರ್ಯಕ್ರಮದ ಬಳಿಕ ಪ್ರಾಯೋಗಿಕವಾಗಿ ಸಿಪಿಆರ್ ಚಿಕಿತ್ಸೆಯ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ ನಡೆಯಿತು. ಮೈಸೂರು ಜೆಎಸ್‌ಎಸ್ ಮೆಡಿಕಲ್ ಕಾಲೇಜಿನ ಡಾ. ಆದರ್ಶ್, ಡಾ.ನಯನ್, ಡಾ.ಅರ್ಪಿತಾ, ಬೆಂಗಳೂರಿನ ಕ್ಯಾಡರ್ ಇಂಟರ್‌ನ್ಯಾಷನಲ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಎಕ್ಮೊ ಸ್ಪೆಷಲಿಸ್ಟ್ ಡಾ. ನಿರಂಜನ್ ಅವರು ಸಿಪಿಆರ್ ಚಿಕಿತ್ಸಾ ವಿಧಾನದ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ಚಿಕಿತ್ಸಾ ಸಮಯ, ಅನುಸರಿಸಬೇಕಾದ ಕ್ರಮಗಳ ಕುರಿತು ವಿದ್ಯಾರ್ಥಿಗಳಿಗೆ ಸಂಕ್ಷಿಪ್ತವಾಗಿ ಮಾಹಿತಿ ನೀಡಿದರು.
ಕಾಲೇಜಿನ ಐಕ್ಯೂಎಸಿ ಸಂಚಾಲಕಿ ಹೇಮಾ, ಎನ್‌ಎಸ್‌ಎಸ್ ಅಧಿಕಾರಿ ಬಿ.ಎನ್.ಶಾಂತಿಭೂಷಣ್, ಯುವ ರೆಡ್‌ಕ್ರಾಸ್ ಘಟಕದ ಅಧಿಕಾರಿ ವಿಲೀನ ಗೋನ್ಸಾಲ್ವೇಸ್, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.