ಶಾಲೆ ತೊರೆದ, ದುಡಿವ ಮಕ್ಕಳಿಗೆ ಶಿಕ್ಷಣ

mkg1
Published on

ಹೊನ್ನಾಳಿ: ಶಾಲಾ ದಾಖಲಾತಿ ಆಂದೋಲನಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ, ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಹಕರಿಸಬೇಕು ಎಂದು ತಹಸೀಲ್ದಾರ್ ತಿರುಪತಿ ಪಾಟೀಲ್ ಮನವಿ ಮಾಡಿದರು.
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಸೋಮವಾರ ಪಟ್ಟಣದಲ್ಲಿ ತಾಲೂಕು ಅಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ ಹಾಗೂ ಶಿಕ್ಷಣ ಇಲಾಖೆ ನೇತೃತ್ವದಲ್ಲಿ ಜಾಗೃತಿ ಜಾಥಾ ನಡೆಸಿ ಹಾಗೂ ಬಾಲ ಕಾರ್ಮಿಕ ಪದ್ಧತಿ ವಿರೋಧಿಸಿ ಶಾಲಾ ಮಕ್ಕಳಿಗೆ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
14 ವರ್ಷದೊಳಗಿನ ಯಾವುದೇ ದುಡಿಯುವ ಮತ್ತು ಶಾಲೆ ಬಿಟ್ಟ ಮಕ್ಕಳು ಕಂಡಲ್ಲಿ ಅವರನ್ನು ಗುರುತಿಸಿ, ಅವರ ಮನವೋಲಿಸಿ ಹತ್ತಿರದ ಸರ್ಕಾರಿ ಶಾಲೆಗಳಿಗೆ ದಾಖಲಿಸುವ ಮೂಲಕ ಶಾಲಾ ದಾಖಲಾತಿ ಆಂದೋಲನಕ್ಕೆ ಸಾಕ್ಷಿಯಾಗಿ ನಿಲ್ಲಬೇಕು ಎಂದು ಮಕ್ಕಳ ಪೋಷಕರು ಮತ್ತು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ನಂಜರಾಜ್ ಮಾತನಾಡಿ, ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು. ಈ ಬಗ್ಗೆ ಸರ್ಕಾರ ಕೂಡ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದು, ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಮಾಡುವುದು ಪೋಷಕರು, ಶಿಕ್ಷಕರು ಹಾಗೂ ಅಧಿಕಾರಿಗಳು ಕರ್ತವ್ಯವಾಗಿದೆ ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಮಹಾಂತೇಶ್ ಸ್ವಾಮಿ ಪೂಜಾರ್ ಮಾತನಾಡಿ, ಸಾರ್ವಜನಿಕರು 14 ವರ್ಷದೊಳಗಿನ ಸ್ವಂತ ಮಕ್ಕಳನ್ನೂ ಸೇರಿದಂತೆ ಯಾವುದೇ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಳ್ಳವಂತ್ತಿಲ್ಲ. ಇದು ಶಿಕ್ಷಾರ್ಹ ಅಪರಾಧವಾಗುತ್ತದೆ. ಜೊತೆಗೆ ರೂ. 20 ಸಾವಿರದಿಂದ 50 ಸಾವಿರದವರೆಗೆ ದಂಡ ತೆರಬೇಕಾಗಬಹುದು ಎಂದು ಎಚ್ಚರಿಸಿದರು.
ಬಾಲಕಾರ್ಮಿಕ ದಿನಾಚರಣೆ ಅಂಗವಾಗಿ ತಾಲೂಕು ಕಚೇರಿ ಮುಂಭಾಗದಲ್ಲಿ ಸೇರಿದ್ದ ವಿದ್ಯಾರ್ಥಿಗಳಿಗೆ ತಹಸೀಲ್ದಾರ್ ತಿರುಪತಿ ಪಾಟೀಲ್ ಪ್ರತಿಜ್ಞಾವಿಧಿ ಬೋಧಿಸಿದ ನಂತರ ಬಾಲಕಾರ್ಮಿಕ ವಿರೋಧಿ ಜನಜಾಗೃತಿ ಜಾಥಾವನ್ನು ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ನಡೆಸಲಾಯಿತು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವೀರೇಶ್, ಕಾರ್ಮಿಕ ಇಲಾಖೆ ಪ್ರದೀಪ್, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net