ಹೆಲ್ತ್ ಅಕೌಂಟ್ ನೋಂದಣಿಗೆ ಸಹಕರಿಸಿ: ಎಡಿಸಿ ಡಾ.ಎಚ್.ಎಲ್.ನಾಗರಾಜು ಸೂಚನೆ

Adc Meeting
Published on

ಮಂಡ್ಯ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್(ಅಬಾ) ನೋಂದಣಿಗೆ ನ್ಯಾಯಬೆಲೆ ಅಂಗಡಿ ಮಾಲೀಕರು ಸಹಕಾರ ನೀಡುವಂತೆ ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ತಹಸೀಲ್ದಾರ್, ಆರೋಗ್ಯಾಧಿಕಾರಿಗಳು, ಆಹಾರ ಇಲಾಖೆ ಅಧಿಕಾರಿಗಳು, ಗ್ರಾಮ ಒನ್ ಕೇಂದ್ರದ ಪ್ರಾಂಚೈಸಿ ನಿರ್ವಾಹಕರು ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಬೆಲೆ ಅಂಗಡಿ ಮಾಲೀಕರೊಂದಿಗೆ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆರೋಗ್ಯ ಭಾರತ್ ಹೆಲ್ತ್ ಅಕೌಂಟ್(ಅಬಾ) ಕಾರ್ಡ್‌ನ್ನು ಕೇಂದ್ರ ಸರ್ಕಾರ ಉಚಿತವಾಗಿ ನೀಡುತ್ತಿದೆ. ಸಾರ್ವಜನಿಕರ ಆರೋಗ್ಯದ ಮಾಹಿತಿಯನ್ನು ಸುಲಭವಾಗಿ ದೊರಕುವಂತೆ ವ್ಯಕ್ತಿಯ ಆರೋಗ್ಯದ ಮಾಹಿತಿಯನ್ನು ಒಂದೇ ಸೂರಿನಡಿ ದೊರಕಿಸಿ, ಆರೋಗ್ಯದ ಸೌಲಭ್ಯಗಳು ಸುಲಭವಾಗಿ ದೊರಕುವಂತೆ ಮಾಡುವ ಮಹತ್ವದ ಯೋಜನೆ. ಬಿಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿಗಳು ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 5 ಲಕ್ಷ ರೂವರೆಗೆ ಹಾಗೂ ಎಪಿಎಲ್ ಕಾರ್ಡ್ ಹೊಂದಿರುವ ವ್ಯಕ್ತಿಗಳು 1.5 ಲಕ್ಷ ರೂವರೆಗೆ ಉಚಿತವಾಗಿ ಚಿಕಿತ್ಸೆ ಪಡೆಯಬಹುದು. ಚಿಕಿತ್ಸೆಯ ಮಾಹಿತಿಯನ್ನು ದೇಶದ ಯಾವುದೇ ಭಾಗದಲ್ಲಿ ಆನ್‌ಲೈನ್ ಮೂಲಕ ಪಡೆಯಬಹುದಾಗಿದೆ. ಅಲ್ಲದೆ ದೇಶದ ಯಾವುದೇ ರಾಜ್ಯದಲ್ಲಾದರೂ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ ಎಂದು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ 17ಲಕ್ಷಕ್ಕಿಂತಲೂ ಹೆಚ್ಚಿನ ಜನಸಂಖ್ಯೆಯಿದ್ದು, ಈವರೆಗೆ ಸುಮಾರು 90 ಸಾವಿರ ಜನರಿಗೆ ಆರೋಗ್ಯ ಕಾರ್ಡ್ ನೋಂದಣಿ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಒನ್ ಕೇಂದ್ರದ ಮಾಲೀಕರು ಇದಕ್ಕಾಗಿ ಪರಿಶ್ರಮ ಪಡುತ್ತಿದ್ದಾರೆ. ಇವರೊಂದಿಗೆ ನ್ಯಾಯಬೆಲೆ ಅಂಗಡಿ ಮಾಲೀಕರು ಕೈಜೋಡಿಸಬೇಕು. ಜಿಲ್ಲೆಯಲ್ಲಿ 15,30,148 ಬಿಪಿಎಲ್ ಹಾಗೂ 1,89,833 ಎಪಿಎಲ್ ಕಾರ್ಡ್‌ದಾರರಿದ್ದರು. ಒಟ್ಟು 17,20,031 ಜನರಿಗೂ ನ್ಯಾಯಬೆಲೆ ಅಂಗಡಿ ಮೂಲಕ ಆರೋಗ್ಯ ಕಾರ್ಡ್ ನೋಂದಣಿ ಮಾಡುವ ಗುರಿ ಹೊಂದಲಾಗಿದೆ. ಇದಕ್ಕಾಗಿ ತಹಸೀಲ್ದಾರ್‌ಗಳು ಗ್ರಾಮಲೆಕ್ಕಾಧಿಕಾರಿ ಹಾಗೂ ಗ್ರಾಮ ಸಹಾಯಕರ ಮೂಲಕ ಪ್ರಚಾರ ನಡೆಸಬೇಕು. ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿ ಮಾಲೀಕರು ಗ್ರಾಮ ಒನ್ ಪ್ರಾಂಚೈಸಿದಾರರಿಗೆ ಸ್ಥಳಾವಕಾಶ, ಸೌಲಭ್ಯ ಒದಗಿಸಿಕೊಡಬೇಕು. ನ್ಯಾಯಬೆಲೆ ಅಂಗಡಿ ಆವರಣದಲ್ಲಿಯೇ ಆರೋಗ್ಯ ಕಾರ್ಡ್ ನೋಂದಣಿ ಮಾಡಿಸಲು ಅನುಕೂಲ ಮಾಡಿಕೊಡಬೇಕು ಎಂದು ಅವರು ತಿಳಿಸಿದರು.

ಸಭೆಯಲ್ಲಿ ಆಹಾರ ಇಲಾಖೆ ಉಪ ನಿರ್ದೇಶಕ ಎಂ.ಪಿ.ಕೃಷ್ಣಕುಮಾರ್, ಗ್ರಾಮ ಒನ್ ಕೇಂದ್ರದ ಜಿಲ್ಲಾ ಯೋಜನಾ ವ್ಯವಸ್ಥಾಪಕಿ ಶ್ವೇತಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net