ಆರೋಗ್ಯ ಕೇಂದ್ರಗಳಲ್ಲಿ ಆಯುಷ್ಮಾನ್‌ಭವ

ayusmanbava meeting in devnhalli dc office
dc aoffice meeting
Published on

ಜಿಲ್ಲಾಧಿಕಾರಿ ಎನ್.ಶಿವಶಂಕರ್ ಮಾಹಿತಿ

ಡಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ


ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಸಾರ್ವಜನಿಕರ ವೈದ್ಯಕೀಯ ಸೇವೆಗೆ ಸಹಕಾರಿಯಾಗಿರುವ ಆಯುಷ್ಮಾನ್‌ಭವ 3.0 ಗೆ ಸೆ.13 ರಂದು ರಾಷ್ಟ್ರಮಟ್ಟದಲ್ಲಿ ರಾಷ್ಟ್ರಪತಿಗಳು ಚಾಲನೆ ನೀಡಲಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಎಲ್ಲ ಸಾಮಾನ್ಯ ಆರೋಗ್ಯ ಕೇಂದ್ರಗಳು ಹಾಗೂ ತಾಲೂಕು ಆರೋಗ್ಯ ಕೇಂದ್ರಗಳಲ್ಲಿ ಅಯುಷ್ಮಾನ್ ಭವನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ತಿಳಿಸಿದರು.
ದೇವನಹಳ್ಳಿ ತಾಲೂಕು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಆಯುಷ್ಮಾನ್‌ಭವ 3.0 ಅನುಷ್ಠಾನ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಆಯುಷ್ಮಾನ್ ಕಾರ್ಡ್‌ನ ಉಪಯೋಗದ ಕುರಿತು ಜಿಲ್ಲೆಯಲ್ಲಿ ಸೆ. 17 ರಿಂದ ಅ.2 ರವರೆಗೆ ಮನೆ-ಮನೆಗೆ ಭೇಟಿ ನೀಡಿ ಪ್ರಚಾರ ಕಾರ್ಯ ಕೈಗೊಳ್ಳಲಾಗುವುದು. ಗ್ರಾಮ ಪಂಚಾಯಿತಿ, ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.
ಸಂಘ-ಸಂಸ್ಥೆಗಳ ಸದಸ್ಯರು, ಸ್ಥಳೀಯ ಸಂಸ್ಥೆಗಳ ಸದಸ್ಯರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಸೇರಿ ಆಯುಷ್ಮಾನ್ ಕಾರ್ಡ್ ಮಾಡಿಸದ ಸಾರ್ವಜನಿಕರಿಗೆ ಇದರ ಮಹತ್ವದ ಬಗ್ಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಹೆಚ್ಚಿನ ಜನರು ಆರೋಗ್ಯ ಕಾರ್ಡ್ ಪಡೆದುಕೊಳ್ಳುವಂತೆ ಕ್ರಮಕೈಗೊಳ್ಳಬೇಕು ಎಂದರು.
ಅಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಅಭಿಯಾನದಲ್ಲಿ ಭಾಗಿಯಾಗಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ ಸೇರಿ ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯಕ್ರಮ ಯಶಸ್ವಿಯಾಗಲು ಕ್ರಮವಹಿಸಿ ಎಂದರು.
ಪ್ರತಿ ಶನಿವಾರ ಶಿಬಿರ:
ಪ್ರಾಥಮಿಕ ಆರೋಗ್ಯ ಕೇಂದ್ರ , ತಾಲೂಕು ಆರೋಗ್ಯ ಕೇಂದ್ರ ಗಳಲ್ಲಿ ಪ್ರತಿ ಶನಿವಾರ ವಿಷಯಾಧಾರಿತ ಶಿಬಿರಗಳನ್ನು ನಡೆಸಿ, ರೋಗ ಪತ್ತೆ ಮಾಡಿ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗುವುದು. ವಿವಿಧ ಶಿಬಿರಗಳನ್ನು ಡಿಸೆಂಬರ್‌ಅಂತ್ಯದವರೆಗೆ ಆಯೋಜಿಸಲಾಗುವುದು. ಜಿಲ್ಲೆಯಲ್ಲಿರುವ ಆಕಾಶ್ ವೈದ್ಯಕೀಯ ಶಿಕ್ಷಣ ಸಂಸ್ಥೆ, ಸಿದ್ದಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆ, ಎಂ.ವಿ.ಜೆ ಶಿಕ್ಷಣ ಸಂಸ್ಥೆಗಳು ಶಿಬಿರದಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net