

ಮಂಡ್ಯ: ತಾಲೂಕಿನ ಬಿ.ಹೊಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್‌ನ 3000 ಮೀ ನಡಿಗೆ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಎಚ್.ಪಿ.ಸಂಕಲ್ಪ ಪ್ರಥಮ ಸ್ಥಾನ, 10ನೇ ತರಗತಿ ವಿದ್ಯಾರ್ಥಿನಿ ಎಚ್.ಕೆ.ಅನುಶ್ರೀ ದ್ವಿತೀಯ ಹಾಗೂ 5000 ಮೀ ಬಾಲಕರ ನಡಿಗೆ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿ ಎಚ್.ಜಿ.ಗೌತಮ್ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನ.16 ರಿಂದ 18ರವರೆಗೆ ನಡೆಯಲಿರುವ ಕ್ರೀಡಾಕೂಟದಲ್ಲಿ ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಎಸ್‌ಡಿಎಂಸಿ ಆಡಳಿತ ಮಂಡಳಿ, ಶಿಕ್ಷಕರು ಅಭಿನಂದಿಸಿದ್ದಾರೆ.
ಶಾಲೆಯ ವಿದ್ಯಾರ್ಥಿಗಳು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ತಂಡ ಪ್ರಶಸ್ತಿ ಪಡೆದಿದ್ದರು. 13 ವರ್ಷದಿಂದ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಹೆಗ್ಗಳಿಕೆ ಶಾಲೆಗಿದೆ. 2016ರಲ್ಲಿ ಕೇರಳ, 2018ರಲ್ಲಿ ದೆಹಲಿ, 2019ರಲ್ಲಿ ಪಂಜಾಬ್ನಲ್ಲಿ ಇದೇ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟದ ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.