ಹುಬ್ಬಳ್ಳಿಗೆ ಭೇಟಿ ನೀಡಿದ ಬಿ.ಎಲ್. ಸಂತೋಷ

New Santosh BL
Published on

ಹುಬ್ಬಳ್ಳಿ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ ಶನಿವಾರ ಮಧ್ಯಾಹ್ನ ಹುಬ್ಬಳ್ಳಿಯ ಆರ್​ಎಸ್​ಎಸ್ ಕಾರ್ಯಾಲಯ ಕೇಶವ ಕುಂಜಕ್ಕೆ ಭೇಟಿ ನೀಡಿ, ಪ್ರಸಕ್ತ ಲೋಕಸಭೆ ಚುನಾವಣೆ ಕುರಿತು ಸುಮಾರು ಒಂದು ತಾಸು ಚರ್ಚೆ ನಡೆಸಿದರು.

ಕೊಪ್ಪಳದಲ್ಲಿ ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ ಬಿ.ಎಲ್. ಸಂತೋಷ, ದೆಹಲಿಗೆ ಹೋಗುವ ಮಾರ್ಗ ಮಧ್ಯದಲ್ಲಿ ಮಧ್ಯಾಹ್ನ ಹುಬ್ಬಳ್ಳಿಗೆ ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕೇಶವ ಕುಂಜದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಬಿಜೆಪಿ ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ ಹಾಗೂ ಹು-ಧಾ ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಸಂತೋಷ ಚವ್ಹಾಣ ಅವರೊಂದಿಗೆ ಧಾರವಾಡ ಕ್ಷೇತ್ರ ಸೇರಿದಂತೆ 2ನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚುನಾವಣೆ ಪ್ರಚಾರ ನಡೆಸಿದ್ದು, ಎಲ್ಲೆಡೆ ಬಿಜೆಪಿ ಪರ ವಾತಾವರಣ ಇದೆ. ಮೊದಲ ಹಂತದಲ್ಲಿ ಚುನಾವಣೆ ನಡೆದ ಎಲ್ಲ 14 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ನಿಶ್ಚಿತ. 2ನೇ ಹಂತದ 14 ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇದೆ. ಹೀಗಾಗಿ, ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿ.ಎಲ್. ಸಂತೋಷ ಇದೇ ಸಂದರ್ಭದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಂತರ ವಿಮಾನ ನಿಲ್ದಾಣದ ಆವರಣದಲ್ಲಿ ಬಿ.ಎಲ್. ಸಂತೋಷ ಅವರು ಹುಬ್ಬಳ್ಳಿಯ ಬಿಜೆಪಿ ಕಾರ್ಯಕರ್ತರೊಂದಿಗೆ ಫೋಟೊ ತೆಗೆಯಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net