

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರರಿಗೆ ಕರೊನಾ ಸೋಂಕು ತಗುಲಿರುವುದು ಶುಕ್ರವಾರ ರಾತ್ರಿ ದೃಢವಾಗಿದೆ.
ಈ ಬಗ್ಗೆ ವಿಜಯೇಂದ್ರ ಸ್ವತಃ ಟ್ವೀಟ್ ಮಾಡಿದ್ದಾರೆ. ನನ್ನ ಕರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಕ್ವಾರಂಟೈನ್ನಲ್ಲಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಎಲ್ಲಾ ಮುನ್ನೆಚ್ಚರಿಕೆ ವಹಿಸಿಬೇಕು ಎಂದು ವಿನಂತಿಸಿಕೊಂಡಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ಸಿಎಂ ಬಿಎಸ್ವೈ ಅವರಿಗೂ ಸೋಂಕು ತಗುಲಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಬಳಿಕ ಗುಣಮುಖರಾಗಿ ಮರಳಿದ್ದರು. ಇದೀಗ ವಿಜಯೇಂದ್ರ ಅವರಿಗೆ ಸೋಂಕು ತಗುಲಿದ್ದು ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಲಿ ಎಂದು ಪಕ್ಷದ ನಾಯಕರು, ಕಾರ್ಯಕರ್ತರು ಮತ್ತು ಅಭಿಮಾನಿಗಳು ಹಾರೈಸಿದ್ದಾರೆ.