ಕೋಲಿ ಸಮಾಜದ ಸಮಾವೇಶ 8ಕ್ಕೆ

CHINCANASUR
Published on

ಯಾದಗಿರಿ: ಕಲಬುರಗಿ ತಾಲೂಕಿನ ಹಾಗರಗುಂಡಗಿ ಗ್ರಾಮದಲ್ಲಿ 8ರಂದು ಬೆಳಗ್ಗೆ 10.30ಕ್ಕೆ ನಿಜಶರಣ ಅಂಬಿಗರ ಚೌಡಯ್ಯನವರ ದೇವಸ್ಥಾನದ ಉದ್ಘಾಟನೆ, ಚೌಡಯ್ಯನವರ ಜಯಂತಿ ಹಾಗೂ ಕೋಲಿ ಸಮಾಜದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ ತಿಳಿಸಿದರು.

ಈ ಹಿಂದೆ ನಾನು ಸಚಿವನಾಗಿದ್ದ ವೇಳೆ ಸೇಡಂ ತಾಲೂಕಿನ ಯಾನಾಗುಂದಿಯಲ್ಲಿ ಕೋಲಿ ಸಮಾಜದ ಬೃಹತ್ ಸಮಾವೇಶ ಆಯೋಜಿಸಿದ್ದೇನೆ. ಅದರಂತೆ ಈ ಬಾರಿ ಹಾಗರಗುಂಡಗಿ ಗ್ರಾಮದಲ್ಲಿ ಕಾರ್ಯಕ್ರಮ ನಡೆಸುತ್ತಿದ್ದು, ಉಪಮುಖ್ಯಮಂತ್ರಿ ಡಾ.ಅಶ್ವಥನಾರಾಯಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಚಲನಚಿತ್ರ ನಟಿ ಭಾವನಾ, ಮಿಸ್ ಇಂಡಿಯಾ ತನುಶ್ರೀ ತ್ಯಾಗಿ ಸೇರಿ ಮತ್ತಿತರರು ಪಾಲ್ಗೊಳ್ಳಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಕೇಂದ್ರ ಸರ್ಕಾರ ಹಿಂದುಳಿದ ಕೋಲಿ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕಾಲ ಸನ್ನಿಹಿತವಾಗಿದ್ದು, ಕೆಲವೇ ದಿನಗಳಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ನಿಯೋಗ ಕೊಂಡೊಯ್ಯಲಿದ್ದಾರೆ. ಅಲ್ಲದೆ ತಾವು ಕೂಡಾ 4 ತಿಂಗಳು ದೆಹಲಿಯಲ್ಲಿ ಬೀಡುಬಿಟ್ಟು ನಮ್ಮ ಸಮಾಜವನ್ನು ಎಸ್ಟಿಗೆ ಸೇರ್ಪಡೆ ಮಾಡಲು ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿವೆ ಎಂದರು.

ಸಿಎಂ ಬಿಎಸ್ವೈ ಮಂಡಿಸಲಿರುವ ಬಜೆಟ್ನಲ್ಲಿ ಚೌಡಯ್ಯ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಅನುದಾನ ಮೀಸಲಿಡುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಅವರು, ಹಿರಿಯ ಸ್ವಾತಂತ್ರೃ ಹೋರಾಟಗಾರ ದೊರೆಸ್ವಾಮಿ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆ ಪ್ರತಿಕ್ರಿಯಿಸಲು ನಿರಾಕರಿಸಿದರು.
ಟೋಕರಿ ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ್, ಅನಸೂಯಾ ಬಾಂಬೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net