

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹೆಣ್ಣುಮಕ್ಕಳ ಜನನ ಪ್ರಮಾಣ ಕ್ಷೀಣವಾಗುತ್ತಿದ್ದು, ಈ ಬಗ್ಗೆ ಎಲ್ಲಾ ವೈದ್ಯರು ಗಂಭೀರವಾಗಿ ಚಿಂತಿಸಿ ಆತ್ಮ ಸಾಕ್ಷಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಸೂಚನೆ ನೀಡಿದರು.
ನಗರದ ಭಾರತೀಯ ವೈದ್ಯಕೀಯ ಸಂಘದ ಕಟ್ಟಡದಲ್ಲಿ ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಏರ್ಪಡಿಸಿದ್ದ ಪಿಸಿ ಮತ್ತು ಪಿಎನ್‌ಡಿಟಿ ಹಾಗೂ ಕೆಪಿಎಂಇ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಳೆದ 10 ವರ್ಷಗಳ ಸರಾಸರಿ ಜನನ ಪ್ರಮಾಣ ಗಮನಿಸಿದರೆ ಹೆಣ್ಣು ಹಾಗೂ ಗಂಡು ಮಕ್ಕಳ ಜನನ ಪ್ರಮಾಣದ ಅನುಪಾತದಲ್ಲಿ ಹೆಣ್ಣು ಮಕ್ಕಳ ಜನನ ಕಡಿಮೆಯಾಗುತ್ತಿದೆ. ಸ್ವಾಭಾವಿಕವಾಗಿ ಗಂಡು ಮಕ್ಕಳ ಜನನ ಪ್ರಮಾಣ ಹೆಚ್ಚಾದರೂ ಚಿಂತೆಯಿಲ್ಲ. ಆದರೆ ಹೆಣ್ಣು ಮಕ್ಕಳ ಜನನ ಪ್ರಮಾಣದಲ್ಲಿ ಇಳಿಕೆಯಾಗುತ್ತಿರುವ ಬಗ್ಗೆ ಚಿಂತನೆ ನಡೆಸಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳು ನಡೆದಿಲ್ಲವಾದರೂ ಕಳಸ, ಕಡೂರು, ತರೀಕೆರೆ, ಚಿಕ್ಕಮಗಳೂರು ತಾಲೂಕಿನಲ್ಲಿ ಸರಾಸರಿ10 ವರ್ಷದ ಅವಧಿಯಲ್ಲಿ ಹೆಣ್ಣು ಶಿಶುಗಳ ಜನನ ಪ್ರಮಾಣ ಕಡಿಮೆಯಿದೆ. ಇದಕ್ಕೆ ಕಾರಣ ಹುಡುಕಬೇಕು. ವೈದ್ಯರು ಲಿಂಗ ತಾರತಮ್ಯಕ್ಕೆ ಅವಕಾಶ ನೀಡದಂತೆ ಮನಸಾಕ್ಷಿಯಿಂದ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಲಿಂಗ ಪತ್ತೆ ಮತ್ತು ಭ್ರೂಣ ಹತ್ಯೆ ಪ್ರಕರಣಗಳು ನಡೆಯದಂತೆ ನಿಗಾ ವಹಿಸಬೇಕೆಂದು ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್‌ಬಾಬು ಮಾತನಾಡಿ, ಪ್ರತಿ 3 ವರ್ಷಕ್ಕೊಮ್ಮೆ ಸರ್ಕಾರ ಜಿಲ್ಲಾ ಮಟ್ಟದ ಸಲಹಾ ಸಮಿತಿ ಮತ್ತು ತಪಾಸಣಾ ಹಾಗೂ ಮೇಲ್ವಿಚಾರಣ ಎಂಬ 2 ಪ್ರತ್ಯೇಕ ಸಮಿತಿಗಳನ್ನು ರಚಿಸಿ, ಭ್ರೂಣ ಮತ್ತು ಲಿಂಗಪತ್ತೆ ಕುರಿತಂತೆ ಜನರಿಗೆ ಅರಿವು ಮೂಡಿಸುವ ಕಾರ್ಯ ನಿರ್ವಹಿಸುತ್ತಿದೆ ಎಂದು ವಿವರಿಸಿದರು.