ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ

Govind karjol,
Published on

ಬಾಗಲಕೋಟೆ: ಕೋವಿಡ್-19 ನಿಯಂತ್ರಣ ಸರ್ಕಾರದ ಮೊದಲ ಆದ್ಯತೆಯಾಗಿದೆ. ಜಿಲ್ಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಹಾಗೂ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ಮೂಲಕ ಕೋವಿಡ್-19 ನಿಯಂತ್ರಣಕ್ಕೆ ಮತ್ತಷ್ಟು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾಡಳಿತಕ್ಕೆ ಕೋವಿಡ್ ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮಕ್ಕಾಗಿ ನಿರ್ದೇಶನ ನೀಡಲಾಗಿದೆ. ಗುಳೆ ಹೋದ ಜನ ಮರಳಿ ತಮ್ಮ ಊರುಗಳಿಗೆ ಹಿಂದಿರುಗುತ್ತಿದ್ದು, ಅವರಿಗೆ ಪ್ರತಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಅವಶ್ಯಕತೆ ಇದ್ದವರೆಲ್ಲರಿಗೂ ಕಡ್ಡಾಯವಾಗಿ ಉದ್ಯೋಗ ಕೊಡುವಂತೆ ಕ್ರಮ ಕೈಗೊಳ್ಳಲು ತಿಳಿಸಿದ್ದಾರೆ.

ಕೋವಿಡ್ ಹೆಚ್ಚಾಗಿ ಹರಡುತ್ತಿರುವ ಗ್ರಾಮಗಳಲ್ಲಿ ಯಾವ ಕಾರಣಕ್ಕಾಗಿ ಹರಡುತ್ತಿದೆ ಎನ್ನುವುದನ್ನು ಪತ್ತೆ ಹಚ್ಚಲು ಗ್ರಾಮಗಳಲ್ಲಿ ಕಾರ್ಯಪಡೆಗಳನ್ನು ಕಡ್ಡಾಯವಾಗಿ ರಚನೆ ಮಾಡಬೇಕು. ತರಕಾರಿ ಮಾರುಕಟ್ಟೆಗಳಲ್ಲಿ ಜನಜಂಗುಳಿ ಹೆಚ್ಚಾಗಿದ್ದು, ಪರಸ್ಪರ ಅಂತರವನ್ನು ಕಾಯ್ದುಕೊಳ್ಳುತ್ತಿಲ್ಲ. ಎಲ್ಲ ವಾರ್ಡ್‌ಗಳಲ್ಲಿ ಸುಲಲಿತವಾಗಿ ತರಕಾರಿ ದೊರಕುವಂತೆ ವ್ಯವಸ್ಥೆ ಕಲ್ಪಿಸಬೇಕು. ವಿನಾಕಾರಣ ಜನರನ್ನು ಭಯಭೀತಗೊಳಿಸಲು ಕೆಲವರು ಸುಳ್ಳು ಸುದ್ದಿ/ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಅಂತಹವರ ಬಗ್ಗೆ ನಿಗಾವಹಿಸಬೇಕು ಎಂದಿದ್ದಾರೆ.

ರೆಮ್‌ಡೆಸಿವಿರ್ ಚುಚ್ಚು ಮದ್ದನ್ನು ಅಗತ್ಯಕ್ಕೆ ಅನುಗುಣವಾಗಿ ಸರ್ಕಾರ ಪೂರೈಕೆ ಮಾಡುತ್ತಿದೆ. ಕೆಲವರು ಕೃತಕ ಅಭಾವ ಸೃಷ್ಟಿಸಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಪ್ರಯತ್ನ ಮಾಡುತ್ತಿದ್ದಾರೆ. ಅಂತಹವರ ಬಗ್ಗೆ ಪೊಲೀಸರು ಹೆಚ್ಚು ತೀವ್ರ ನಿಗಾವಹಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಎಲ್ಲ ತಾಲೂಕುಗಳಲ್ಲಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿ, ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಲು ತಿಳಿಸಿದ್ದಾರೆ.

ಆಸ್ಪತ್ರೆಗಳಲ್ಲಿ ಬೆಡ್ (ಹಾಸಿಗೆ) ಲಭ್ಯತೆ ಮಾಹಿತಿಯನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ನೀಡಬೇಕು. ಜಿಲ್ಲೆಯಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಮಾಹಿತಿ ಸಂಗ್ರಹಿಸುವುದು, ಆಕ್ಸಿಜನ್ ಲಭ್ಯತೆಯ ಮಾಹಿತಿ ಸಂಗ್ರಹಿಸುವುದು ಮತ್ತು ಕೊರತೆಯಾಗದಂತೆ ಎಚ್ಚರ ವಹಿಸುವುದು, ಕಡ್ಡಾಯವಾಗಿ ವಲಸಿಗರ ಮಾಹಿತಿ ಸಂಗ್ರಹಿಸುವುದು, ಅವಶ್ಯವಿರುವ ಎಲ್ಲ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಕೋವಿಡ್-19 ನಿಯಂತ್ರಣ ಕರ್ತವ್ಯಕ್ಕೆ ನಿಯೋಜಿಸಿ, ಸಕ್ರಿಯವಾಗಿ ಕಾರ್ಯನಿರ್ವಹಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದಾರೆ.

ಅನುಪಾಲನಾ ವರದಿ ಸಲ್ಲಿಸಿ
ಕೋವಿಡ್ ಸೊಂಕಿತ ರೋಗಿಗಳಿಗೆ ಹಾಸಿಗೆ ಕೊರತೆಯಾಗದಂತೆ ವಸತಿ ಶಾಲೆ, ವಸತಿ ನಿಲಯಗಳನ್ನು ಸಜ್ಜುಗೊಳಿಸಿ ಆಸ್ಪತ್ರೆಯ ಅನೆಕ್ಸ್ ಕಟ್ಟಡವೆಂದು ಗುರುತಿಸಿ, ಸೌಲಭ್ಯ ಕಲ್ಪಿಸಬೇಕು. ಸಣ್ಣ-ಸಣ್ಣ ಮನೆ ಇದ್ದವರಿಗೆ ಕ್ವಾರಂಟೈನ್‌ನಲ್ಲಿಡುವ ಪರಿಸ್ಥಿತಿ ಎದುರಾದರೆ ವಸತಿ ನಿಲಯ, ವಸತಿ ಶಾಲೆಗಳಲ್ಲಿ ಕ್ವಾರಂಟೈನ್‌ನಲ್ಲಿಟ್ಟು ಆರೈಕೆ ಮಾಡಬೇಕು. ಹೋಬಳಿ ಮಟ್ಟದಲ್ಲಿ ಸಾರ್ವಜನಿಕರ ಸಲಹಾ ಸಮಿತಿ ರಚಿಸಿ, ಸರ್ಕಾರದ ಮಾರ್ಗಸೂಚಿಗಳ ಅನುಷ್ಠಾನದ ಬಗ್ಗೆ ಪಾರದರ್ಶಕತೆ ಇರುವಂತೆ ನೋಡಿಕೊಳ್ಳಲು ಕ್ರಮಕೈಗೊಳ್ಳಬೇಕು. ಜಿಲ್ಲಾಡಳಿತವು ಈ ಎಲ್ಲ ಸೂಚನೆಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ, ಅನುಪಾಲನಾ ವರದಿಯನ್ನು ಸಲ್ಲಿಸಲು ಡಿಸಿಎಂ ಕಾರಜೋಳ ಸೂಚಿಸಿದ್ದಾರೆ.

Community-verified icon
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net