

ಬಾಗಲಕೋಟೆ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರು ಉಚಿತವಾಗಿ ಕೊಡಮಾಡಿದ 5 ಆಕ್ಸಿಜನ್ ಕಾನ್ಸನ್‌ಟ್ರೇಟರ್‌ಗಳನ್ನು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಅವರ ಮೂಲಕ ಬುಧವಾರ ಜಿಲ್ಲಾ ಆಸ್ಪತ್ರೆಗೆ ಹಸ್ತಾಂತರಿಸಲಾಯಿತು.
ಜಿಲ್ಲಾಧಿಕಾರಿ ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಕೋವಿಡ್ ಸಂಕಷ್ಟದ ಸಮಯದಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ಸೋಂಕಿತರಿಗೆ ಚಿಕಿತ್ಸೆಗೆ ಅನುಕೂಲವಾಗಲೆಂದು ಆಕ್ಸಿಜನ್ ಕಾನ್ಸನ್‌ಟ್ರೇಟರ್ ಎಲ್ಲ ಜಿಲ್ಲೆಗಳಿಗೆ ನೀಡುತ್ತಿರುವುದು ಮಾದರಿ ಕಾರ್ಯವಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಧರ್ಮಸ್ಥಳ ಸಂಸ್ಥೆ ಜಿಲ್ಲಾ ನಿರ್ದೇಶಕ ಮಹೇಶ ಎಂ.ಡಿ., ಎಂಐಎಸ್ ಯೋಜನಾಧಿಕಾರಿ ಜ್ಯೋತಿ ಹೋಳದ ಇತರರು ಉಪಸ್ಥಿತರಿದ್ದರು.