

ಬಾಗಲಕೋಟೆ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಆದೇಶ ಹೊರಡಿಸಿದ್ದಾರೆ.
ಸರ್ಕಾರ ಆದೇಶ, ಮಾರ್ಗಸೂಚಿಗಳನ್ನು ಉಲ್ಲಂಸುವವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಸನ್ 188ರ ಅಡಿಯಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ದೀಪಾವಳಿ ಆಚರಣೆಗೆ ಹಸಿರು ಪಟಾಕಿ ಮಾತ್ರ ಮಾರಾಟ ಮಾಡಲು ಅನುಮತಿ ನೀಡಿದ್ದು, ವಾಯುವಿನ ಗುಣಮಟ್ಟದ ಆಧಾರ ಮೇಲೆ ಹಸಿರು ಪಟಾಕಿಗಳನ್ನು ರಾತ್ರಿ 8 ರಿಂದ 10 ಗಂಟೆವರೆಗೆ ಮಾತ್ರ ಸಿಡಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ವೋಚ್ಚ ನ್ಯಾಯಾಲಯವು ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳನ್ನು ಮಾರಾಟ ಮಾಡತಕ್ಕದ್ದಲ್ಲ ಮತ್ತು ಹಚ್ಚತಕ್ಕದಲ್ಲ.
ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿ ಪಡೆದ ಮಾರಾಟಗಾರರು ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ಮಾರಾಟ ಮಳಿಗೆಯನ್ನು ನ.16 ವರೆಗೆ ಮಾತ್ರ ತೆರೆಯಬೇಕು. ಪಟಾಕಿ ಮಳಿಗೆಯಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಎರಡು ಮಳಿಗೆಯ ನಡುವೆ 6 ಮೀಟರ್ ಅಂತರವಿರಬೇಕು.
ಪಟಾಕಿ ಮಾರಾಟ ಮಳಿಗೆಗಳ ಸುತ್ತಮುತ್ತ ಹಾಗೂ ಪಟಾಕಿ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸುವುದರ ಜತೆಗೆ ಕನಿಷ್ಠ 6 ಅಡಿ ಪರಸ್ಪರ ಅಂತರ ಪಾಲನೆ ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾರಾಟಗಾರರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಖರೀದಿ ಸಂದರ್ಭದಲ್ಲಿ ಜನದಟ್ಟಣೆಯಾಗದಂತೆ ಕ್ರಮವಹಿಸಬೇಕು. ಕೋವಿಡ್-19 ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿದ ಮಾರ್ಗ ಸೂಚಿಗಳನ್ನು ತಪ್ಪದೆ ಪಾಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
EndFragment