

ಬಾಗಲಕೋಟೆ: ರಾಮನಗರದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ವಿಧಾನ ಪರಿಷತ್ ಸದಸ್ಯ ರವಿ ಗೂಂಡಾ ವರ್ತನೆ ತೋರಿದ್ದಾರೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಘಟಕದಿಂದ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಶಿವಾನಂದ ಜೀನ್‌ನಲ್ಲಿನ ಬಿಜೆಪಿ ಜಿಲ್ಲಾ ಕಚೇರಿಯಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಬಸವೇಶ್ವರ ವೃತ್ತಕ್ಕೆ ಆಗಮಿಸಿದ ಕಾರ್ಯಕರ್ತರು, ಮುಖಂಡರು, ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿದರು. ನಂತರ ಪ್ರತಿಕೃತಿ ದಹಿಸಿ ಆಕ್ರೋಶ ಹೊರ ಹಾಕಿದರು.
ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮಾತನಾಡಿ, ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್, ವಿಪ ಸದಸ್ಯ ರವಿ ನಡೆದಿಕೊಂಡಿರುವ ರೀತಿ ಅಸಹ್ಯವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದ್ದರು ಗೌರವದಿಂದ ವರ್ತಿಸಿಲ್ಲ. ರಾಮನಗರ ಜಿಲ್ಲೆಯನ್ನು ಅಭಿವೃದ್ಧಿ ಮಾಡಲಾಗದವರು ಬಿಜೆಪಿ ಸರ್ಕಾರದ ಅಭಿವೃದ್ಧಿ ಸಹಿಸಲು ಸಾಧ್ಯವಾಗದೆ ಗೂಂಡಾ ವರ್ತನೆ ತೋರಿದ್ದಾರೆ. ಹೀಗೆ ಮುಂದುವರಿದಲ್ಲ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ಅನಿವಾರ್ಯವಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಕೆಟ್ಟ ವರ್ತನೆ ತೋರುವುದು ಶೋಭೆ ತರುವುದಿಲ್ಲ. ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಮಾಡಬಾರದು. ದೇಶದಲ್ಲಿ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಸೇರಿ ವಿರೋಧ ಪಕ್ಷಗಳು ಸುಖಾಸುಮ್ಮನೆ ಗಲಭೆ ಎಬ್ಬಿಸುತ್ತಿವೆ. ಬಿಎಸ್‌ಪಿಯ ಸೌಜನ್ಯದ ಪಾಠವನ್ನು ಉಳಿದ ವಿರೋಧ ಪಕ್ಷಗಳು ಕಲಿತುಕೊಳ್ಳಬೇಕು ಎಂದು ಹೇಳಿದರು.
ವಿಪ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಬಿಟಿಡಿಎ ಸದಸ್ಯರಾದ ಕುಮಾರ ಯಳ್ಳಿಗುತ್ತಿ, ಶಿವಾನಂದ ಟವಳಿ, ಮುಖಂಡರಾದ ರಾಜು ಮುದೆನೂರ, ವೀರಣ್ಣ ಹಳೇಗೌಡರ, ಜಯಂತ ಕುರಂದವಾಡ ಇತರರಿದ್ದರು.