31 ರಂದು ಸಂಘಟನಾ ಸಮಾವೇಶ

JDS
Published on

ಬಾಗಲಕೋಟೆ: ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಬಲಗೊಳಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜ.31 ರಂದು ಜೆಡಿಎಸ್ ಪಕ್ಷದ ಸಂಘಟನಾ ಸಮಾವೇಶ, ಪಕ್ಷದ ಬೆಂಬಲಿತ ಗ್ರಾಪಂ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ನಗರದ ಕಾಳಿದಾಸ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ಜಿಲ್ಲಾ ಘಟಕ ಅಧ್ಯಕ್ಷ ಹನುಮಂತ ಮಾವಿನಮರದ ಹೇಳಿದರು.

ಸಮಾವೇಶದಲ್ಲಿ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ರಾಜ್ಯ ಘಟಕ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಸಚಿವರಾದ ಬಸವರಾಜ ಹೊರಟ್ಟಿ, ಬಂಡೆಪ್ಪ ಕಾಶಂಪುರ ಇತರ ನಾಯಕರು ಭಾಗವಹಿಸಲಿದ್ದಾರೆ. ಜಿಲ್ಲೆಯ ವಿವಿಧ ಭಾಗದಿಂದ 20 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ. ಇದೇ ವೇಳೆ ಮುಧೋಳ, ಬಾದಾಮಿ ತಾಲೂಕಿನ ಬಿಜೆಪಿ, ಕಾಂಗ್ರೆಸ್ ಪಕ್ಷದ ಮುಖಂಡರು ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎರಡು ರಾಷ್ಟ್ರೀಯ ಪಕ್ಷಗಳು ರೈತರು, ದೇಶವಾಸಿಗಳ ಹಿತವನ್ನು ಬಲಿಕೊಡುತ್ತಿವೆ. ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅಧಿಕಾರಕ್ಕೆ ಬಂದಾಗ ಬೆಳಗಾವಿಯಲ್ಲಿ ಸುವರ್ಣ ಸೌಧ, ಧಾರವಾಡದಲ್ಲಿ ಹೈಕೋರ್ಟ್ ಸ್ಥಾಪಿಸಿ, ಉ.ಕ ಭಾಗದಲ್ಲಿ ಗ್ರಾಮ ವಾಸ್ತವ್ಯ ಮಾಡಿ ಜನಪರ ಆಡಳಿತ ನೀಡಿದ್ದಾರೆ. ಸಾವಿರಾರು ಕೋಟಿ ರೂ. ರೈತರ ಸಾಲ ಮನ್ನಾ ಮಾಡಿ ಅನ್ನದಾತರ ಬದುಕು ಹಸನುಗೊಳಿಸಿದ್ದಾರೆ. ಮಾಜಿ ಪ್ರಧಾನಿ, ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ನೀರಾವರಿಗೆ ಅಪಾರ ಕೊಡುಗೆ ನೀಡಿದ್ದಾರೆ. ಇದೆಲ್ಲ ಜನರಿಗೆ ತಿಳಿಸಿ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಉತ್ತಮವಾಗಿ ಸಂಘಟಿಸುವ ನಿಟ್ಟಿನಲ್ಲಿ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೂತ್‌ಮಟ್ಟದಲ್ಲಿ ಪಕ್ಷವನ್ನು ಕಟ್ಟಲಾಗುತ್ತಿದೆ. ಸದಸ್ಯತ್ವ ನೋಂದಣಿ ಆರಂಭಿಸಲಾಗಿದೆ ಎಂದರು. ಮುಖಂಡರಾದ ರೇಣುಕಾ ಭಜಂತ್ರಿ, ಘನಶಾಮ ಬಾಂಡಗೆ, ಸಲೀಂ ಮೋಮಿನ್, ಶರಣು ಹುರಕಡ್ಲಿ, ಕೃಷ್ಣಾ ಪಾಟೀಲ ಸುದ್ದಿಗೋಷ್ಠಿಯಲ್ಲಿ ಇದ್ದರು.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net