ಪ್ರಾಧಿಕಾರದಿಂದ ಸಮಾಜಮುಖಿ ಕೆಲಸ

BKT 9-2
Published on

ಬಾಗಲಕೋಟೆ: ಕಾನೂನು ಸೇವಾ ಪ್ರಾಧಿಕಾರದಿಂದ ದೊರೆಯುವ ಪ್ರಯೋಜನಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಕಲ್ಪನಾ ಕುಲಕರ್ಣಿ ಹೇಳಿದರು.

ಜಿಲ್ಲಾ ನ್ಯಾಯಾಲಯದ ಸಭಾಭವನದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪ್ರಾಧಿಕಾರದ ಮೂಲಕ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಇದರ ಜತೆಗೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸರ್ಕಾರದ ಸೌಲಭ್ಯಗಳನ್ನು ಅರ್ಹ ಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಕಾನೂನು ಸೇವಾ ಪ್ರಾಧಿಕಾರ ರಾಜ್ಯದಲ್ಲಿ 1995 ನ. 9 ರಂದು ಅಸ್ತಿತ್ವಕ್ಕೆ ಬಂದಿದ್ದು, ಈ ದಿನವನ್ನು ಪ್ರಾಧಿಕಾರದ ದಿನವನ್ನಾಗಿ ಆಚರಿಸಲಾಗುತ್ತಿದೆ. ಅಂದಿನಿಂದಲೂ ಪ್ರಾಧಿಕಾರ ಸಮಾಜಮುಖಿಯಾಗಿ ಕೆಲಸ ಮಾಡುತ್ತಿದೆ. ನೊಂದವರ, ದುರ್ಬಲ ವರ್ಗದವರ ಹಕ್ಕುಗಳು ಉಲ್ಲಂಘನೆಯಾದಲ್ಲಿ ಪ್ರಾಧಿಕಾರದ ಮೂಲಕ ಉಚಿತವಾಗಿ ನ್ಯಾಯ ಒದಗಿಸಿ, ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಬೆಳೆಯುವಂತೆ ಮಾಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ಹೇಮಲತಾ ಹುಲ್ಲೂರ ಮಾತನಾಡಿ, ಎಲ್ಲ ಜನರಿಗೂ ಕಾನೂನು ನೆರವು ದೊರೆಯಲಿ ಎಂಬುದು ಪ್ರಾಧಿಕಾರದ ಉದ್ದೇಶವಾಗಿದೆ. ಉಚಿತ ಕಾನೂನು ನೆರವು, ಇತ್ಯರ್ಥವಾಗದ ಪ್ರಕರಣಗಳನ್ನು ಲೋಕ್ ಅದಾಲತ್ ಮೂಲಕ ಇತ್ಯರ್ಥ ಪಡಿಸುವುದು ಸೇರಿ ಕೋವಿಡ್-19 ಮತ್ತು ಪ್ರವಾಹದ ಸಂದರ್ಭದಲ್ಲಿಯೂ ಪ್ರಾಧಿಕಾರವು ನೆರವಿನ ಹಸ್ತ ಚಾಚಿದೆ ಎಂದು ಹೇಳಿದರು.

ನ್ಯಾಯವಾದಿ ಪ್ರಕಾಶ ಮಾಳೇದ ಉಪನ್ಯಾಸ ನೀಡಿದರು. ಪ್ರಧಾನ ಕೌಟುಂಬಿಕ ನ್ಯಾಯಾಧೀಶೆ ಶೀಲಾ ಎನ್., ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶ ಪ್ರಕಾಶ ವಿ., 1ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಎಂ.ಎ.ಎಚ್.ಮೊಗಲಾನಿ, 2ನೇ ಹೆಚ್ಚುವರಿ ಹಿರಿಯ ದಿವಾಣಿ ನ್ಯಾಯಾಧೀಶ ಆರ್.ಎಲ್.ಹೊನೊಲೆ, ಹೆಚ್ಚುವರಿ ದಿವಾಣಿ ನ್ಯಾಯಾಧೀಶ ನಾಗರಾಜ ಎನ್., ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎನ್.ಎಚ್.ಶಿವನಿಚ್ಚಿ, ಸರ್ಕಾರಿ ಅಭಿಯೋಜಕ ಸುನಿಲ ಹಂಜಿ, ಜಿಲ್ಲಾ ನ್ಯಾಯಾಲದ ಮುಖ್ಯ ಆಡಳಿತಾಧಿಕಾರಿ ಎಂ.ಎಚ್.ಕಡಕೋಳ ಇತರರು ಉಪಸ್ಥಿತರಿದ್ದರು. ಯಲ್ಲಪ್ಪ ತಳವಾರ ಪ್ರಾರ್ಥಿಸಿದರು. ಬಸವರಾಜ ಬಾದೊಡಗಿ ನಿರೂಪಿಸಿ, ವಂದಿಸಿದರು.

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದನ್ವಯ ಬಾಗಲಕೋಟೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ನ್ಯಾಯಾಲಯಕ್ಕೆ ದಾಖಲಾಗದೆ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಡಿ.19 ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
-ಹೇಮಲತಾ ಹುಲ್ಲೂರ, ಸದಸ್ಯ ಕಾರ್ಯದರ್ಶಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net