ಸಾರ್ವಜನಿಕರ ಅಲೆದಾಟ ತಪ್ಪಿಸಿ

BKT NEWS 1-2
Published on

ಬಾಗಲಕೋಟೆ: ನಗರಸಭೆಗೆ ಸಾರ್ವಜನಿಕರು ಪದೇ ಪದೆ ಅಲೆದಾಡುವುದನ್ನು ತಪ್ಪಿಸಿ, ಸುಗಮವಾಗಿ ಅವರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಕೆ.ರಾಜೇಂದ್ರ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜನನ, ಮರಣ ಪ್ರಮಾಣ ಪತ್ರ, ಕಟ್ಟಡ ಪರವಾನಗಿ, ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರು ನಗರಸಭೆಗೆ ಪದೇ ಪದೆ ಅಲೆದಾಡುವುದನ್ನು ತಪ್ಪಿಸಬೇಕು. ನಿಗದಿತ ಅವಧಿಯಲ್ಲಿ ಅವರ ಕೆಲಸ ಕಾರ್ಯಗಳು ಆಗಬೇಕು. ಯಾವುದೇ ರೀತಿಯ ಕಿರುಕುಳ ನೀಡಬಾರದು. ಅಂತಹ ಸಂದರ್ಭಗಳು ಕಂಡು ಬಂದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ವಿವಿಧ ಕೆಲಸ, ಕಾರ್ಯಗಳಿಗಾಗಿ ಕಚೇರಿಗೆ ಆಗಮಿಸಿದ ಸಾರ್ವಜನಿಕರ ಮೇಲೆ ವಿನಾಕಾರಣ ಒತ್ತಡ ಹೇರುತ್ತಿರುವ ಬಗ್ಗೆ ದೂರುಗಳು ಬಂದಿವೆ. ಆದ್ದರಿಂದ ಸಾರ್ವಜನಿಕರ ಮೇಲೆ ಯಾವುದೇ ರೀತಿಯ ಒತ್ತಡ ಹೇರುವಂತಿಲ್ಲ. ಸಮಯಕ್ಕೆ ಸರಿಯಾಗಿ ಸ್ಪಂದಿಸಬೇಕು. ಕೆಲಸ ಕಾರ್ಯಗಳನ್ನು ಸುವ್ಯವಸ್ಥಿತವಾಗಿ ಮಾಡಿಕೊಡುವಂತಾಗಬೇಕು. ಇನ್ನು ವಿವಿಧ ಯೋಜನೆಗಳಿಗೆ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಸಮರ್ಪಕವಾಗಿ ವಿನಿಯೋಗಿಸಬೇಕು. ಕಾಮಗಾರಿಗಳು ನಿಗದಿತ ಅವಧಿಯೊಳಗೆ ಅನುಷ್ಠಾನಗೊಳ್ಳಬೇಕು. ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು.

ನಗರಸಭೆ ಆಯುಕ್ತ ವಿ.ಮುನಿಶಾಮಪ್ಪ ಮಾತನಾಡಿ, ನಗರಸಭೆಯಲ್ಲಿ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾಗಿರುವ ಅನುದಾನದ ವಿವರ, ಖರ್ಚು ಹಾಗೂ ಕೈಗೊಂಡಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ವಿವರಗಳನ್ನು ಸಭೆಗೆ ತಿಳಿಸಿದರು. ಪ್ರಸಕ್ತ ಸಾಲಿನಲ್ಲಿ 179.66 ಲಕ್ಷ ರೂ. ಕರ ವಸೂಲಾತಿ ಬೇಡಿಕೆ ಇದ್ದು, ಈ ಪೈಕಿ ಒಟ್ಟು 40.82 ಲಕ್ಷ ರೂ. ವಸೂಲಿ ಆಗಿರುತ್ತದೆ ಎಂದು ತಿಳಿಸಿದರು.

ಪ್ರೊಬೇಷನರಿ ಐಎಎಸ್ ಅಧಿಕಾರಿ ಯಶವಂತ ಗುರುಕಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಗಣಪತಿ ಪಾಟೀಲ ಸೇರಿ ಇತರ ಅಧಿಕಾರಿಗಳು, ಅಭಿಯಂತರರು ಉಪಸ್ಥಿತರಿದ್ದರು.

ನಗರಸಭೆಯ ಪ್ರತಿಯೊಬ್ಬ ಅಧಿಕಾರಿಗಳು ಮೊದಲು ತಮ್ಮ ತಮ್ಮ ಕಚೇರಿಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಇದರಿಂದ ತಮ್ಮ ಆರೋಗ್ಯ ಉತ್ತಮವಾಗಿರುವುದರ ಜತೆಗೆ ವಿವಿಧ ಯೋಜನೆಗಳ ಅಭಿವೃದ್ಧ್ದಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುತ್ತದೆ. ಸರ್ಕಾರದಿಂದ ಬಿಡುಗಡೆಯಾದ ಅನುದಾನ ಯಾವುದೇ ಕಾರಣಕ್ಕೂ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು. ನಗರ ಸ್ವಚ್ಛತೆಗೆ ಹೆಚ್ಚಿನ ಮಹತ್ವ ನೀಡಬೇಕು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಕರ ವಸೂಲಾತಿಗೆ ಕ್ರಮವಹಿಸಬೇಕು.
- ವೀರಣ್ಣ ಚರಂತಿಮಠ

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net