ಹುನಗುಂದದ ಲಕ್ಷ್ಮೀ ನಗರದಿಂದ ರಾಷ್ಟ್ರೀಯ ಹೆದ್ದಾರಿ-50 ಸಂಪರ್ಕ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ವಿಜಯಾನಂದ ಕಾಶಪ್ಪನವರ ಭೂಮಿ ಪೂಜೆ ನೆರವೇರಿಸಿದರು. ಮಹಾಂತೇಶ ಅವಾರಿ, ಶಿವಾನಂದ ಕಂಠಿ, ಸಂಗಣ್ಣ ಗಂಜಿಹಾಳ, ಮುಖಂಡರು ಉಪಸ್ಥಿತರಿದ್ದರು.
1.05 ಕೋಟಿ ರೂ. ವೆಚ್ಚದಲ್ಲಿ ಲಕ್ಷ್ಮೀ ನಗರ ರಾಷ್ಟ್ರೀಯ ಹೆದ್ದಾರಿ ಸಂಪರ್ಕ
ರಸ್ತೆ ನಿರ್ಮಾಣಕ್ಕೆ ಚಾಲನೆ
ಹುನಗುಂದ : ಡಾ. ಬಿ.ಆರ್. ಅಂಬೇಡ್ಕರ್ ಕಾಲನಿ ಮಾರ್ಗವಾಗಿ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಹಾಲಿ ರಸ್ತೆ ಇಕ್ಕಟ್ಟಾಗಿರುವುದರಿಂದ ಸಂಚಾರ ದಟ್ಟಣೆ ಉಂಟಾಗುತ್ತಿದೆ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ನಗರದಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನದ 4ನೇ ಹಂತದ ಯೋಜನೆಯಡಿ 1.05 ಕೋಟಿ ರೂ. ವೆಚ್ಚದಲ್ಲಿ ಲಕ್ಷ್ಮೀ ನಗರದಿಂದ ರಾಷ್ಟ್ರೀಯ ಹೆದ್ದಾರಿ-50ಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಹೊಸ ಸಂಪರ್ಕ ರಸ್ತೆ ನಿರ್ಮಿಸಲಾಗುತ್ತಿದ್ದು, ಎರಡು ವಾಹನಗಳು ಸುಗಮವಾಗಿ ಸಂಚರಿಸುವಂತೆ ಗುಣಮಟ್ಟದ ಕಾಮಗಾರಿಯನ್ನು ನಿಗದಿತ ಅವಽಯಲ್ಲಿ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಅಪೂರ್ಣ ಒಳಚರಂಡಿ ಯೋಜನೆ ಪೂರ್ಣಗೊಳಿಸಲು 43 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಅಲ್ಲದೆ, ಅಲ್ಪಸಂಖ್ಯಾತರು ಹಾಗೂ ಎಸ್‌ಸಿ/ ಎಸ್‌ಟಿ ಕಾಲನಿಗಳಲ್ಲಿ ಸಿಸಿ ರಸ್ತೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಮುಂದಿನ ಎರಡು-ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು.