

ವಿಜಯವಾಣಿ ಸುದ್ದಿಜಾಲ ಬಾಗಲಕೋಟೆ
ಪ್ರೌಢಶಾಲಾ ಹಂತಕ್ಕೆ ಬರುವ ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರಾಥಮಿಕ ಹಂತದಲ್ಲಿಯೇ ಶಿಕ್ಷಣದ ಗುಣಮಟ್ಟ ಸುಧಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಸಲಹೆ ನೀಡಿದರು.
ನಗರದ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಸೋಮವಾರ ಜರುಗಿದ ಪ್ರಾಥಮಿಕ ಶಾಲಾ ಮುಖ್ಯ ಗುರುಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರೌಢಶಾಲಾ ಹಂತಕ್ಕೆ ಬರುವ ಕೆಲವು ಮಕ್ಕಳಲ್ಲಿ ಕಲಿಕಾ ಸಾಮರ್ಥ್ಯ ಕಡಿಮೆ ಇರುವುದನ್ನು ಗಮನಿಸಲಾಗಿದೆ. ಹೀಗಾಗಿ ಪ್ರಾಥಮಿಕ ಹಂತದಿಂದಲೇ ಮಕ್ಕಳ ಮೂಲ ಕಲಿಕಾ ಸಾಮರ್ಥ್ಯವನ್ನು ಬಲಪಡಿಸುವ ಅಗತ್ಯವಿದೆ. ತಳಮಟ್ಟದಿಂದಲೇ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿದಲ್ಲಿ ಮುಂದಿನ ಹಂತದಲ್ಲಿ ಮಕ್ಕಳ ಕಲಿಕೆಗೆ ಅನುಕೂಲವಾಗುವುದರೊಂದಿಗೆ ಎಸ್ಸೆಸ್ಸೆಲ್ಸಿ ಫಲಿತಾಂಶವೂ ಉತ್ತಮಗೊಳ್ಳಲಿದೆ ಎಂದರು.
ಕೇವಲ ಒಂದು ವಷÀð ಮಾತ್ರ ಉತ್ತಮ ಫಲಿತಾಂಶ ಬಂದರೆ ಸಾಲದು. ಪ್ರತಿ ವರ್ಷವೂ ಉತ್ತಮ ಫಲಿತಾಂಶ ದಾಖಲಿಸುವಂತಾಗಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆಯ ಎಲ್ಲ ಅಧಿಕಾರಿಗಳು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಿ ಶಾಲೆಗಳಿಗೆ ಬರುವ ಬಹುತೇಕ ಮಕ್ಕಳು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸೇರಿದವರಾಗಿರುತ್ತಾರೆ. ಅಂತಹ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದಲ್ಲಿ ಅವರ ಭವಿಷ್ಯ ರೂಪುಗೊಳ್ಳುವುದರ ಜೊತೆಗೆ ಕುಟುಂಬದ ಆರ್ಥಿಕ ಪರಿಸ್ಥಿತಿಯೂ ಸುಧಾರಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ಶಿಕ್ಷಣದಿಂದ ಮಕ್ಕಳು ದೂರ ಉಳಿದರೆ, 12-13 ವಷಗಳಲ್ಲಿಯೇ ಕೆಲಸಕ್ಕೆ ಸೇರಿಸುವ ಪರಿಸ್ಥಿತಿ ಎದುರಾಗಬಹುದು. ಆದ್ದರಿಂದ ಮಕ್ಕಳನ್ನು ಶಾಲೆಯಲ್ಲಿ ಮುಂದುವರಿಸುವಂತೆ ಪಾಲಕರಿಗೆ ಮನವರಿಕೆ ಮಾಡಿಕೊಟ್ಟು, ಅವರ ಶಿಕ್ಷಣಕ್ಕೆ ಆದ್ಯತೆ ನೀಡುವಂತೆ ಶಿಕ್ಷಕರು ಪ್ರೇರೇಪಿಸಬೇಕು ಎಂದರು.
ಖಾಸಗಿ ಶಾಲೆಗಳ ಮಾದರಿಯಲ್ಲಿ ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ಶೈಕ್ಷಣಿಕ ಫಲಿತಾಂಶ ಬಂದಾಗ ಮಾತ್ರ ಮುಂದಿನ ವಷÀð ಹೆಚ್ಚಿನ ಮಕ್ಕಳು ದಾಖಲಾತಿ ಪಡೆಯಲು ಸಾಧ್ಯವಾಗುತ್ತದೆ. ಫಲಿತಾಂಶದಲ್ಲಿ ಸುಧಾರಣೆ ಕಾಣದಿದ್ದರೆ ದಾಖಲಾತಿ ಕುಸಿಯುವ ಸಾಧ್ಯತೆಯಿದೆ. ಇದನ್ನು ಮುಖ್ಯ ಶಿಕ್ಷಕರು ಅರಿತುಕೊಂಡು ಶಾಲೆಯ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಶಾಲಾ ಮಕ್ಕಳ ಕಲಿಕಾ ಸಾಮರ್ಥ್ಯ ಸುಧಾರಿಸಲು ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಕುರಿತು ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಹ ತಮ್ಮ ವ್ಯಾಪ್ತಿಯಲ್ಲಿ ಕಲಿಕಾ ಗುಣಮಟ್ಟ ಹೆಚ್ಚಿಸಲು ಕೈಗೊಂಡಿರುವ ಕ್ರಮಗಳ ಕುರಿತು ಸಭೆಗೆ ವಿವರವಾದ ಮಾಹಿತಿ ನೀಡಿದರು.
ಜಿಪಂ ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪೂರ, ಸರ್ವ ಶಿಕ್ಷಣ ಅಭಿಯಾನದ ಉಪ ಸಮನ್ವಯಾಧಿಕಾರಿ ಪ್ರಮೋದಿನಿ ಬಳೂಲಮಟ್ಟಿ, ಜಿಲ್ಲಾ ಅಕ್ಷರ ದಾಸೋಹ ಅಧಿಕಾರಿ ಭಾರತಿ ದಾಸೋಗ, ಶಿಕ್ಷಣಾಧಿಕಾರಿ ಮಾಳನ್ನವರ ಇತರರಿದ್ದರು. ಜಿಲ್ಲೆಯ 300ಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ಮುಖ್ಯ ಗುರುಗಳು ಉಪಸ್ಥಿತರಿದ್ದರು.