ಬಾಲ್ಯ ವಿವಾಹ, ಮಕ್ಕಳ ದೌರ್ಜನ್ಯ, ಶೋಷಣೆ ತಡೆಗಟ್ಟಿ

ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾಮಟ್ಟದ ಏಕೀಕೃತ ಪ್ರಗತಿ ಪರಿಶೀಲನೆ ಸಮಿತಿ ಸಭೆ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಇಲಾಖೆ ಅಧಿಕಾರಿಗಳು ಇದ್ದರು.
ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾಮಟ್ಟದ ಏಕೀಕೃತ ಪ್ರಗತಿ ಪರಿಶೀಲನೆ ಸಮಿತಿ ಸಭೆ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ನಡೆಯಿತು. ಇಲಾಖೆ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚನೆ
  • ಜಿಲ್ಲಾ ಮಟ್ಟದ ಏಕೀಕೃತ ಪರಿಶೀಲನಾ ಸಮಿತಿ ಸಭೆ
ಬಾಗಲಕೋಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯಕ್ಕೆ ಅವಕಾಶ ನೀಡದೇ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯಗಳನ್ನು ತಲುಪಿಸಬೇಕೆಂದು ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಏಕೀಕೃತ ಪ್ರಗತಿ ಪರಿಶೀಲನಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಪೂರ್ವ ಪ್ರಾಥಮಿಕ ಶಿಕ್ಷಣ, ಪೌಷ್ಠಿಕ ಆಹಾರ ಹಾಗೂ ಆರೋಗ್ಯ ಸೇವೆಗಳು ದೊರೆಯುವಂತೆ ಕ್ರಮವಹಿಸಬೇಕು. ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ ಅವರಿಗೆ ವಿಶೇಷ ಆರೈಕೆ ಹಾಗೂ ಚಿಕಿತ್ಸೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಽಸಬೇಕು ಎಂದರು.
ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು ಸಮಾಜದ ಅತ್ಯಂತ ದುರ್ಬಲ ವರ್ಗಗಳ ಜೀವನವನ್ನು ಸುಧಾರಣೆಗೆ ಸಹಕಾರಿಯಾಗಿವೆ. ಯೋಜನೆಗಳ ಅನುಷ್ಠಾನದಲ್ಲಿ ನಿರ್ಲಕ್ಷ್ಯ ತೋರಬಾರದು. ಬಾಲ್ಯವಿವಾಹ ತಡೆ, ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಶೋಷಣೆ ತಡೆಗಟ್ಟುವ ನಿಟ್ಟಿನಲ್ಲಿ ಸಂಬಂಧಿಸಿದ ಇಲಾಖೆಗಳು ಮತ್ತು ಪೊಲೀಸ್ ಇಲಾಖೆ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ತಿಳಿಸಿದರು.
ಮಕ್ಕಳ ಸಹಾಯವಾಣಿ ಸೇವೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಬಾಲ ನ್ಯಾಯ ಮಂಡಳಿಯ ಕಾರ್ಯಚಟುವಟಿಕೆಗಳ ಪ್ರಗತಿಯನ್ನು ಪರಿಶೀಲಿಸಿದರು.
ಮಹಿಳಾ ಸಬಲೀಕರಣ ಕಾರ್ಯಕ್ರಮಗಳಡಿ ಕಾರ್ಯ ನಿರ್ವಹಿಸುತ್ತಿರುವ ಸ್ತ್ರೀಶಕ್ತಿ ಸಂಘಗಳು, ಒನ್ ಸ್ಟಾಪ್ ಸೆಂಟರ್, ಮಹಿಳಾ ಸಹಾಯವಾಣಿ, ಮಹಿಳೆಯರ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು.
ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ಸ್ಪಂದನೆ ನೀಡುವಂತೆ ಹಾಗೂ ಸಂತ್ರಸ್ತರಿಗೆ ಅಗತ್ಯ ನೆರವು ಮತ್ತು ಮಾರ್ಗದರ್ಶನ ಒದಗಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಜಿಲ್ಲೆಯ ಕೆಲವೊಂದು ಗ್ರಾಮಗಳಲ್ಲಿ ಇನ್ನೂ ಶೌಚಗೃಹಗಳನ್ನು ನಿರ್ಮಿಸದೇ ಇರುವುದರಿಂದ ಬಾಲಕಿಯರು ಮತ್ತು ಮಹಿಳೆಯರು ಸಮಸ್ಯೆಗಳನ್ನು ಎದುರಿಸುತ್ತಿದ್ದರೆ, ಇನ್ನು ಶೌಚಗೃಹ ನಿರ್ಮಿಸಿರುವ ಸ್ಥಳಗಳಲ್ಲಿ ಅದರ ಬಳಕೆಯ ಜ್ಞಾನ ಇಲ್ಲದೇ ತೊಂದರೆಗೊಳಗಾಗುತ್ತಿದ್ದಾರೆ. ಅಲ್ಲದೇ ಆರೋಗ್ಯ ಮತ್ತು ನೈರ್ಮಲ್ಯದ ದೃಷ್ಟಿಕೊನದಿಂದ ಶೌಚಗೃಹ ಬಳಕೆಗೆ ಅವಶ್ಯಕವಾಗಿರುವುದರಿಂದ ಈ ಕುರಿತು ಜಿಲ್ಲಾ ಪಂಚಾಯಿತಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಂಬಂಧಿಸಿದ ಇಲಾಖೆಗಳು ಸಮನ್ವಯ ಸಾಽಸಿಕೊಂಡು ಹೆಚ್ಚಿನ ಜನ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದರು.
ಕೌಟುಂಬಿಕ ದೌರ್ಜನ್ಯಗಳ ಕುರಿತು ಕೂಡ ಜಾಗೃತಿ ಮೂಡಿಸಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎನ್‌ಜಿಒಗಳು ಕೌಟುಂಬಿಕ ದೌರ್ಜನ್ಯ ಪ್ರಕರಣಗಳನ್ನು ಪತ್ತೆ ಹಚ್ಚಿ ಕುಟುಂಬ ಹಾಗೂ ಕುಟುಂಬ ಸದಸ್ಯರ ಸಮಸ್ಯೆಗಳನ್ನು ಆಲಿಸಿ ಸಮಾಲೋಚನೆ ನಡೆಸುವ ಮೂಲಕ ಕೌಟುಂಬಿಕ ದೌರ್ಜನ್ಯಗಳನ್ನು ಕಡಿಮೆಗೊಳಿಸಬೇಕು. ಸಮಾಜಕ್ಕೆ ಸ್ವಾಸ್ಥ್ಯ ಕುಟುಂಬವು ಅವಶ್ಯಕವಾಗಿರುತ್ತದೆ. ಆದ್ದರಿಂದ ಹೆಚ್ಚಿನ ಸಮಾಲೋಚನೆ ಮತ್ತು ಸಮಸ್ಯೆಗಳಿಗೆ ಸ್ಪಂದನೆ ನೀಡಿ ಕೌಟುಂಬಿಕ ದೌರ್ಜನ್ಯಗಳನ್ನು ಕಡಿಮೆ ಮಾಡಲು ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಪ್ರಭಾಕರ, ಆರೋಗ್ಯ ಇಲಾಖೆ ಡಾ. ಕುಸುಮಾ ಮಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಮಂಜುನಾಥ ಪರಸನ್ನವರ ಮತ್ತಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net