ಆಮಿಷಕ್ಕೊಳಗಾಗದೇ ಮತದಾನ ಮಾಡಿ

ಬಾಗಲಕೋಟೆ ತಾಲೂಕಿನ ಶೀಗಿಕೇರಿ ಗ್ರಾಮದಲ್ಲಿ ಗುರುವಾರ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಸ್ವೀಪ್ ಅಧ್ಯಕ್ಷ, ಜಿ.ಪಂ. ಸಿಇಒ ಶಶಿಧರ ಕುರೇರ ಹಾಗೂ ಅಧಿಕಾರಿಗಳ ತಂಡ ಮತದಾನದ ಜಾಗೃತಿ ಮೂಡಿಸಿದರು.
ಬಾಗಲಕೋಟೆ ತಾಲೂಕಿನ ಶೀಗಿಕೇರಿ ಗ್ರಾಮದಲ್ಲಿ ಗುರುವಾರ ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಸ್ವೀಪ್ ಅಧ್ಯಕ್ಷ, ಜಿ.ಪಂ. ಸಿಇಒ ಶಶಿಧರ ಕುರೇರ ಹಾಗೂ ಅಧಿಕಾರಿಗಳ ತಂಡ ಮತದಾನದ ಜಾಗೃತಿ ಮೂಡಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಸಂಗಪ್ಪ ಹೇಳಿಕೆ
  • ಮತದಾನ ಜಾಗೃತಿಗೆ ಚಾಲನೆ
  • ಶೀಗಿಕೇರಿಯಲ್ಲಿ ಸ್ವೀಪ್ ಕಾರ್ಯಕ್ರಮ
ಬಾಗಲಕೋಟೆ: ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ತಮ್ಮ ಹಕ್ಕು ಚಲಾಯಿಸಬೇಕು. ಉತ್ತಮ ನಾಗರಿಕರಾಗುವುದರ ಜೊತೆಗೆ ಉತ್ತಮ ಮತದಾರರು ಆಗಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.
ಮತದಾರರಲ್ಲಿ ಮತದಾನದ ಮಹತ್ವ ಸಾರುವ ನಿಟ್ಟಿನಲ್ಲಿ ಶೀಗಿಕೇರಿ ಗ್ರಾಮದಲ್ಲಿ ಜಿ.ಪಂ. ಸಿಇಒ ಶಶಿಧರ ಕುರೇರ ಜೊತೆ ಜಂಟಿಯಾಗಿ ಕರಪತ್ರಗಳನ್ನು ಹಂಚುವ ಮೂಲಕ ಮತದಾನ ಜಾಗೃತಿಗೆ ಗುರುವಾರ ಚಾಲನೆ ನೀಡಿ ಮಾತನಾಡಿದರು.
ಏ. 9 ರಂದು ನಡೆಯುವ ಉಪ ಚುನಾವಣೆಗೆ ಪ್ರತಿಯೊಬ್ಬ ಮತದಾರರು ತಪ್ಪದೇ ತಮ್ಮ ಹಕ್ಕು ಚಲಾಯಿಸಬೇಕು ಎಂದ ಅವರು, ಪ್ರತಿಜ್ಞಾವಿಧಿ ಬೋಧಿಸಿದರು.
ಜಿಲ್ಲಾ ಸ್ವೀಪ್ ಅಧ್ಯಕ್ಷರು ಹಾಗೂ ಜಿ.ಪಂ. ಸಿಇಒ ಶಶಿಧರ ಕುರೇರ ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ನೀಡಿದ್ದು, ಅರ್ಹ ಮತದಾರರು ಏ. 9 ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯಲ್ಲಿ ತಪ್ಪದೇ ತಮ್ಮ ತಮ್ಮ ಮತಗಟ್ಟೆಗೆ ಹೋಗಿ ಮತ ಚಲಾಯಿಸಬೇಕು. ಯುಗಾದಿ, ದೀಪಾವಳಿ ಸೇರಿದಂತೆ ಅನೇಕ ಹಬ್ಬಗಳನ್ನು ಆಚರಿಸುವ ಹಾಗೆ ಚುನಾವಣೆಯನ್ನು ಹಬ್ಬದ ರೂಪದಲ್ಲಿ ಆಚರಿಸುವಂತೆ ಆಗಬೇಕು ಎಂದರು.
ಒಂದು ಹಳ್ಳಿ, ಗ್ರಾಮ ಹಾಗೂ ಊರು ಅಭಿವೃದ್ದಿಯಾಗಬೇಕಾದರೆ, ಮೊದಲು ನಮ್ಮ ಹಕ್ಕನ್ನು ನಾವು ಪ್ರಾಮಾಣಿಕವಾಗಿ ಚಲಾಯಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕಾಗುತ್ತದೆ. ಪಾಲ್ಗೊಂಡಾಗ ಮಾತ್ರ ಉತ್ತಮ ವ್ಯಕ್ತಿಯನ್ನು ಆಯ್ಕೆ ಮಾಡಲು ಸಾಧ್ಯವಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಪವಿತ್ರವಾಗಿದ್ದು, ತಪ್ಪದೇ ತಮ್ಮ ಅಮೂಲ್ಯವಾದ ಮತವನ್ನು ಚಲಾಯಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ. ಪ್ರಭಾಕರ, ಜಿ.ಪಂ. ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ಬಾಗಲಕೋಟೆ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾಂವಿ, ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ರವಿ ಇದ್ದಲಗಿ, ಶೀಗಿಕೇರಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುರೇಶ ನಾಯಕ ಸೇರಿ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net