

ಬಾಗಲಕೋಟೆ: ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಜೈಭೀಮ-ನಾಗವಾರ ಬಣ) ನಗರದಲ್ಲಿ ಪ್ರತಿಭಟನೆ ನಡೆಸಿತು.
ನವನಗರದ ಜಿಲ್ಲಾಡಳಿತ ಭವನ ಎದುರು ಸೋಮವಾರ ಪ್ರತಿಭಟನೆ ನಡೆಸಿದ ಸಂಘಟನೆ ಕಾರ್ಯಕರ್ತರು ಕೇಂದ್ರ ಸರ್ಕಾರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇಡಿ, ಐಟಿ , ಸಿಬಿಐ ಹಾಗೂ ಚುನಾವಣಾ ಆಯೋಗದಂತಹ ಸಾಂವಿಧಾನಿಕ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿ ಬಾಗಲಕೋಟೆ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಕಳೆದ 12 ವರ್ಷಗಳಿಂದ ವಿರೋಧ ಪಕ್ಷಗಳ ಜನಪ್ರತಿನಿಧಿಗಳು, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಾಯಕರ ಮೇಲೆ ನಿರಂತರವಾಗಿ ಇಡಿ, ಐಟಿ ಹಾಗೂ ಸಿಬಿಐ ದಾಳಿಗಳನ್ನು ನಡೆಸಿ, ಅವರ ರಾಜಕೀಯ ನೈತಿಕತೆ ಕುಗ್ಗಿಸುವ ಯತ್ನ ನಡೆಯುತ್ತಿದೆ ಎಂದು ದೂರಿದರು.
ಕೇಂದ್ರದ ತನಿಖಾ ಸಂಸ್ಥೆಗಳ ದುರುಪಯೋಗದ ಮೂಲಕ ವಿಪಕ್ಷಗಳ ನಾಯಕರನ್ನು ಹೆದರಿಸಿ ಹಾಗೂ ಇತರೆ ರಾಜಕೀಯ ತಂತ್ರಗಳಿಂದ ಹಲವು ರಾಜ್ಯ ಸರ್ಕಾರಗಳನ್ನು ಅಸ್ಥಿರಗೊಳಿಸಿ ಅಧಿಕಾರ ಹಿಡಿಯಲಾಗುತ್ತಿದೆ ಎಂದು ಆರೋಪಿಸಿದರು.
ಸಾಂವಿಧಾನಿಕ ಸಂಸ್ಥೆಗಳ ಸ್ವಾಯತ್ತತೆ ಹಾಗೂ ಸರ್ಕಾರದ ಪಾರದರ್ಶಕತೆಯನ್ನು ತಕ್ಷಣವೇ ಕಾಪಾಡಬೇಕು. ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ ಧೋರಣೆ ತೋರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಸಂಘಟನೆ ರಾಜ್ಯ ಸಂಚಾಲಕ ಶಾಮರಾವ್ ಘಾಟಗೆ, ಬೆಳಗಾವಿ ವಿಭಾಗೀಯ ಸಂಚಾಲಕ ಹಣಮಂತ ಚಿಮ್ಮಲಗಿ, ಬಾಗಲಕೋಟೆ ಜಿಲ್ಲಾ ಸಂಘಟನಾ ಸಂಚಾಲಕ ಆನಂದ ದೊಡ್ಡಮನಿ, ಸಂಗಣ್ಣ ಮಡ್ಡಿ, ಚಂದ್ರು ಹರಿಜನ, ಕೃಷ್ಣಾ ನಾಯ್ಕರ, ಲಕ್ಷ್ಮಣ ಹರಿಜನ ಹಾಗೂ ಸಮಿತಿಯ ವಿವಿಧ ಪದಾಧಿಕಾರಿಗಳು ಇದ್ದರು.