

ಉಡುಪಿ: ಮುಸ್ಲೀಂ ಸಮುದಾಯದವರು ಜಿಲ್ಲಾದ್ಯಂತ ಈದುಲ್ ಅಝಾ (ಬಕ್ರೀದ್)ಹಬ್ಬವನ್ನು ಸೋಮವಾರ ಸಂಭ್ರಮ, ಸಡಗರದಿಂದ ಆಚರಿಸಿದರು.
ಉಡುಪಿ ನಗರ, ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಹಾಗೂ ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಜ್ ಆಚರಿಸಿದರು.
ಮುಸ್ಲೀಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಜ್ ಮಾಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಜ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿಯ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿಯ ಅಂಜುಮಾನ್ ಮಸೀದಿಯಲ್ಲಿ ಮೌಲಾನಾ ಇನಾಯುತುಲ್ಲಾ ರಝ್ವಿ ನೇತೃತ್ವದಲ್ಲಿ ಈದ್ ನಮಾಜ್ ನಡೆಸಲಾಯಿತು.
ಉಡುಪಿಯ ನಾಯರ್ಕೆರೆಯ ಹಾಶಿಮಿ ಮಸೀದಿಯಲ್ಲಿ ಮೌಲಾನಾ ಒಬೈದುರ್ ರೆಹಮಾನ್ ನದ್ವಿ ಈದ್ ನಮಾಜ್ ನೇತೃತ್ವ ವಹಿಸಿ ಮಾತನಾಡಿ, ಈದ್ ಅಲ್ ಅದಾಹ್ ಮಹತ್ವ ಹಾಗೂ ಸಮಾಜದಲ್ಲಿ ಪ್ರೀತಿ, ಶಾಂತಿ ಮತ್ತು ಸಾಮರಸ್ಯದ ಮಹತ್ವ ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರೂ ಪಾಲ್ಗೊಂಡು ಈದ್ ಶುಭಾಶಯ ವಿನಿಮಯ ಮಾಡಿದರು.
ಉಡುಪಿ ಜಿಲ್ಲಾ ಸಂಯುಕ್ತ ಜಮಾತ್ನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಜ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಕುಂದಾಪುರದಲ್ಲಿ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರುಮೌಲಾನಾ ಕರಾರ್ ಹುಸೇನ್ನೇತೃತ್ವದಲ್ಲಿ ಈದ್ ನಮಾಜ್ ಆಚರಿಸಲಾಯಿತು.
ಗಂಗೊಳ್ಳಿಯ ಜುಮ್ಮಾ ಮಸೀದಿಯಲ್ಲಿ ಮೌಲಾನಾ ಮುಝಮ್ಮಿಲ್ ನದ್ವಿ, ಮೋಹಿದೀನ್ ಜುಮ್ಮಾ ಮಸೀದಿಯಲ್ಲಿ ಖತೀಬ್ ಮೌಲಾನಾ ಅಬ್ದುಲ್ ಕರೀಂ ನದ್ವಿ,ಶಾಹಿ ಜುಮ್ಮಾ ಮಸೀದಿಯಲ್ಲಿ ಮೌಲಾನಾ ರೆಹಮತುಲ್ಲಾ ಕೋಲ್ಕರ್ ನದ್ವಿ ನೇತೃತ್ವದಲ್ಲಿ ವಿಶೇಷ ನಮಾಜ್ ನಡೆಸಲಾಯಿತು.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.