

ಉಡುಪಿ: ಓದಿನ ಒತ್ತಡದ ನಡುವೆ ಮಕ್ಕಳ ಭೌತಿಕ ಮತ್ತು ಮಾನಸಿಕ ವಿಕಸನಕ್ಕೆ ಪೂರಕ ಚಟುವಟಿಕೆಗಳನ್ನು ಸರ್ಕಾರ ಹಮ್ಮಿಕೊಂಡಿದ್ದು, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ಮಕ್ಕಳ ಹಬ್ಬ ಪ್ರಮುಖ ವೇದಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದರು.
ಮಂಗಳವಾರ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಧಾರವಾಡ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಮಕ್ಕಳ ಹಬ್ಬ ಉದ್ಘಾಟಿಸಿ ಮಾತನಾಡಿದರು.
ಮಕ್ಕಳು ತಮಗಿಷ್ಟವಾದ ಕ್ಷೇತ್ರಗಳಲ್ಲಿ ಸಾಧನೆ ಮಾಡಲು ಸಾಕಷ್ಟು ಅವಕಾಶಗಳಿವೆ. ಅದನ್ನು ಬಳಸಿಕೊಳ್ಳಬೇಕು. ಆಟದ ಜೊತೆಗೆ ಓದಿನ ಕಡೆಯೂ ಗಮನಹರಿಸಬೇಕು. ಪರಿಶ್ರಮದಿಂದ ಪ್ರತಿಫಲ ಸಿಗುತ್ತದೆ. ಮುಂದಿನ ದಿನಗಳಲ್ಲಿ ಉತ್ತಮ ಜೀವನ ಸಾಗಿಸಲು ಈಗಿನಿಂದಲೇ ಪ್ರಯತ್ನಿಸಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಮಾತನಾಡಿ, ಮಕ್ಕಳು ದೇಶದ ಸಂಪತ್ತು. ಅವರು ಆರೋಗ್ಯವಂತರಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಬೇಕೆಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿಕ್ಷಣ ವ್ಯವಸ್ಥೆಯು ಮಕ್ಕಳ ಬಾಲ್ಯವನ್ನು ಕಿತ್ತುಕೊಳ್ಳುವಂತಾಗಬಾರದು. ಮಕ್ಕಳು ಮೊಬೈಲ್ ಗೀಳಿಗೆ ಬಲಿಯಾಗದೇ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಬೇಕು. ಮಕ್ಕಳಿಗೆ ಭವಿಷ್ಯವನ್ನು ಕಲ್ಪಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತಿಕ್ ಬಾಯಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಮಕ್ಕಳ ಕಲ್ಯಾಣ ಸಮಿತಿಯ ಜಿಲ್ಲಾ ಅಧ್ಯಕ್ಷ ರೊನಾಲ್ಡ್ ಬಿ. ಫುಟಾರ್ಡೊ, ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ನಾಗರಾಜ್, ಕ್ರೀಡಾ ಇಲಾಖೆಯ ರವಿಚಂದ್ರ ಉಪಸ್ಥಿತರಿದ್ದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ವೀಣಾ ವಿವೇಕಾನಂದ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ 9 ರಿಂದ 18 ವರ್ಷದೊಳಗಿನ ಸರ್ಕಾರಿ ಶಾಲೆಯ ಮಕ್ಕಳಿಗೆ ಜಾನಪದ ನೃತ, ಸಂಗೀತ, ಚಿತ್ರಕಲೆ, ಕಥೆ ಬರೆಯುವುದು, ನಾಟಕ, ಮನೋರಂಜನಾ ಆಟ, ಖೋ-ಖೋ ಹಾಗೂ ಕಬಡ್ಡಿ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ಸುಮಾರು 350ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು.