

ಬಾಳೆಹೊನ್ನೂರು: ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಮೃತ ಮಹೋತ್ಸವ ಸಮಾರಂಭ ಅ.28ರಂದು ಕಡ್ಲೇಮಕ್ಕಿಯ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಟಿ.ಎಂ.ಉಮೇಶ್ ಕಲ್ಮಕ್ಕಿ ತಿಳಿಸಿದ್ದಾರೆ.
ಬಾಳೆಹೊನ್ನೂರಿನಲ್ಲಿ 1949ರಲ್ಲಿ ಊರಿನ ಹಲವು ಹಿರಿಯರ ಶ್ರಮದ ಲವಾಗಿ ವ್ಯವಸಾಯ ಸೇವಾ ಸಹಕಾರ ಸಂಘ ಹೆಸರಿನಲ್ಲಿ ಆರಂಭಗೊಂಡ ಪಿಎಸಿಎಸ್ ಇಂದು ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ ಎಂದು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅ.28ರ ಸೋಮವಾರ ಸಂಘದ ಪ್ರಧಾನ ಕಚೇರಿಯಲ್ಲಿ ಸಹಕಾರಿ ಧ್ವಜಾರೋಹಣ ನೆರವೇರಿಸಿ ಪಟ್ಟಣದ ಮುಖ್ಯರಸ್ತೆಯಲ್ಲಿ ಸಹಕಾರಿ ಜಾಗೃತಿ ಜಾಥಾ ನಡೆಸಲಾಗುವುದು. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಮಾಗುಂಡಿ ಶಾಖೆ ನೂತನ ವ್ಯಾಪಾರ ಮಳಿಗೆಯನ್ನು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ಉದ್ಘಾಟಿಸಲಿದ್ದಾರೆ. ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಬೆಳ್ಳಿ ಪ್ರಕಾಶ್, ಮಾಜಿ ಸಚಿವ ಡಿ.ಎನ್.ಜೀವರಾಜ್, ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ ಬಿ.ಸಿ.ಗೀತಾ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಿ.ಎಸ್.ಮಹಾಬಲ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.