ಬೋವಿ ಮಹಾ ಉತ್ಸವ ಜು.18

ಅಶೋಕ
ಅಶೋಕ
Published on

ಪ್ರಮುಖ ಮುಖ್ಯಾಂಶಗಳು

  • ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ
  • ವಿವಿಧ ಕ್ಷೇತ್ರಗಳಲ್ಲಿ ಸಾಧನೆ
ಬಳ್ಳಾರಿ : ಬೋವಿ ಸಮುದಾಯದ ಐಕ್ಯತೆ, ಶೈಕ್ಷಣಿಕ ಪ್ರೋತ್ಸಾಹ ಹಾಗೂ ಸಾಮಾಜಿಕ ಬಲವರ್ಧನೆಯ ಉದ್ದೇಶದಿಂದ ಜು.18ರಂದು ಚಿತ್ರದುರ್ಗದಲ್ಲಿ ಬೋವಿ ಮಹಾ ಉತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ರಾಯಚೂರು ಬೋವಿ ಸಮಾಜದ ಜಿಲ್ಲಾಧ್ಯಕ್ಷ ಅಶೋಕ ಉಮಾಲೂಟಿ ತಿಳಿಸಿದರು.
ನಗರದ ಖಾಸಗಿ ಹೊಟೇಲ್‌ನಲ್ಲಿ ಮಂಗಳವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ. ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಯಾವುದೇ ಪದವಿ ಪರೀಕ್ಷೆಗಳಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಗುವುದು ಎಂದು ಹೇಳಿದರು.
ಸಮಾರಂಭವು ಸಮಾಜದ ಧಾರ್ಮಿಕ ಮುಖಂಡರ ಸಾನ್ನಿಧ್ಯದಲ್ಲಿ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನೂ ಇದೇ ಸಂದರ್ಭದಲ್ಲಿ ಗೌರವಿಸಲಾಗುತ್ತದೆ. ಯುವಜನರಲ್ಲಿ ಶಿಕ್ಷಣದ ಬಗ್ಗೆ ಆಸಕ್ತಿ ಮೂಡಿಸುವುದು ಹಾಗೂ ಸಮಾಜದಲ್ಲಿ ಶೈಕ್ಷಣಿಕ ಸಾಧನೆಗೆ ಉತ್ತೇಜನ ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದರು.
ಉತ್ಸವದಲ್ಲಿ ರಾಜ್ಯದ ಪ್ರಮುಖ ರಾಜಕೀಯ ನಾಯಕರು ಭಾಗವಹಿಸುವ ನಿರೀಕ್ಷೆಯಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಂಸದ ಮಲ್ಲೇಶ್‌ಬಾಬು ಸೇರಿದಂತೆ ಸಮಾಜದ ಶಾಸಕರು ಹಾಗೂ ವಿವಿಧ ರಾಜಕೀಯ ಪಕ್ಷಗಳ ಪ್ರಮುಖ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.
ಜಿಲ್ಲೆಯಿಂದ ಸುಮಾರು 5 ಸಾವಿರದಿಂದ 10 ಸಾವಿರ ಜನರನ್ನು ಚಿತ್ರದುರ್ಗಕ್ಕೆ ಕರೆದೊಯ್ಯುವ ಗುರಿ ಹೊಂದಲಾಗಿದ್ದು, ಸಮಾಜದ ಎಲ್ಲ ಮುಖಂಡರು ಹಾಗೂ ಯುವಕರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮವನ್ನು ಐತಿಹಾಸಿಕ ಯಶಸ್ಸಿನತ್ತ ಕೊಂಡೊಯ್ಯಬೇಕು ಎಂದು ಮನವಿ ಮಾಡಿದರು. ಮುಖಂಡರಾದ ತಿಪ್ಪೇಸ್ವಾಮಿ, ಗುರುಮೂರ್ತಿ, ಹನುಮಂತಪ್ಪ, ರಾಮಾಂಜಿನೇಯಲು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net