ಬಳ್ಳಾರಿ : ಕೇಂದ್ರ ಸರ್ಕಾರ ಮಂಡಿಸಿದ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ಕಾಂಗ್ರೆಸ್ ವಿರೋಧ ಖಂಡಿಸಿ, ಇಲ್ಲಿನ ಗಡಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಜೆಡಿಎಸ್ ಘಟಕದಿಂದ ಮಂಗಳವಾರ ಪ್ರತಿಭಟಿಸಲಾಯಿತು.
ಜೆಡಿಎಸ್ ಜಿಲ್ಲಾಧ್ಯಕ್ಷ ಮೀನಹಳ್ಳಿ ತಾಯಣ್ಣ ಮಾತನಾಡಿ, ಮಹಿಳೆಯರಿಗೆ ಶೇ. 33ರಷ್ಟು ರಾಜಕೀಯ ಮೀಸಲಾತಿ ನೀಡುವ ಮಸೂದೆಗೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಮಹಿಳಾ ವಿರೋಧಿ ಧೋರಣೆ ತೋರಿದೆ. ಮಹಿಳೆಯರ ರಾಜಕೀಯ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನ ಕಾಂಗ್ರೆಸ್ ಮಾಡುತ್ತಿದೆ ಎಂದು ಕಿಡಿಕಾರಿದರು.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಅವಧಿಯಲ್ಲೇ ಮಹಿಳಾ ಮೀಸಲಾತಿಗೆ ಆದ್ಯತೆ ನೀಡಲಾಗಿತ್ತು. ಆದರೆ, ಕಾಂಗ್ರೆಸ್ ಮಾತ್ರ ಕಳೆದ ಒಂದೂವರೆ ದಶಕದಿಂದ ಮೀಸಲಾತಿ ಜಾರಿಗೆ ವಿರೋಧಿಸುತ್ತಲೇ ಬಂದಿದೆ. ಕೂಡಲೇ ಕೇಂದ್ರ ಸರ್ಕಾರ ತಕ್ಷಣ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ತರಬೇಕು. ಕಾಂಗ್ರೆಸ್ ತನ್ನ ನಿಲುವು ಪರಿಷ್ಕರಿಸಿ ಮಹಿಳೆಯರ ಪರವಾಗಿ ನಿಲ್ಲಬೇಕು ಎಂದು ಒತ್ತಾಯಿಸಿದರು. ಬಳಿಕ ಕಾಂಗ್ರೆಸ್ ಹಾಗೂ ನಾಯಕರ ವಿರುದ್ಧ ಘೋಷಣೆ ಕೂಗಿ ಅಕ್ರೋಶ ಹೊರಹಾಕಿದರು.