ಸಾರ್ವಜನಿಕರಿಗೆ ಅನ್ಯಾಯ ಮಾಡದಿರಿ

ಹೂವಿನಹಡಗಲಿಯಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಸಮಿತಿ ಅಧ್ಯಕ್ಷ ಪಿ.ಟಿ.ಭರತ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಮಿತಿ ಜಿಲ್ಲಾ ಉಪಾಧ್ಯಕ್ಷ ಗುರುವಿನ ರಾಜು, ತಾಪಂ ಇಒ ಜಿ.ಪರಮೇಶ್ವರ ಇದ್ದರು.
ಹೂವಿನಹಡಗಲಿಯಲ್ಲಿ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ತಾಲೂಕು ಸಮಿತಿ ಅಧ್ಯಕ್ಷ ಪಿ.ಟಿ.ಭರತ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಮಿತಿ ಜಿಲ್ಲಾ ಉಪಾಧ್ಯಕ್ಷ ಗುರುವಿನ ರಾಜು, ತಾಪಂ ಇಒ ಜಿ.ಪರಮೇಶ್ವರ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ತಾಲೂಕು ಅಧ್ಯಕ್ಷ ಪಿ.ಟಿ.ಭರತ್ ಸೂಚನೆ
  • ಹೂವಿನಹಡಗಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ
ಹೂವಿನಹಡಗಲಿ: ಸಾರ್ವಜನಿಕರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಿಗಳು ಸಾರ್ವಜನಿಕರಿಗೆ ತಲುಪಿಸಬೇಕು ಎಂದು ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಪಿ.ಟಿ.ಭರತ್ ಹೇಳಿದರು.
ಪಟ್ಟಣದ ತಾಪಂ ರಾಜೀವಗಾಂಧಿ ಸಭಾಂಗಣದಲ್ಲಿ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಒಟ್ಟು 1054 ಮೃತ ಮಹಿಳೆಯರ ಖಾತೆಗಳಿಗೆ ಗೃಹಲಕ್ಷ್ಮಿ ಯೋಜನೆ ಹಣ ಜಮಾ ಆಗಿರುವ ಮಾಹಿತಿ ಇದೆ. ಅದನ್ನು ಕೂಡಲೇ ಅಧಿಕಾರಿಗಳು ಪರಿಶೀಲಿಸಬೇಕು ಎಂದರು.
ಗೃಹಲಕ್ಷ್ಮಿ ಯೋಜನೆ ಆರಂಭದಿಂದ ತಾಲೂಕಿನಲ್ಲಿ ಈವರೆಗೆ ಫಲಾನುಭವಿಗಳಿಗೆ ಸುಮಾರು 270 ಕೋಟಿ ರೂ. ಪಾವತಿಯಾಗಿದೆ. ತಾಲೂಕಿನ ನ್ಯಾಯಬೆಲೆ ಅಂಗಡಿಗಳ ಮುಂಭಾಗದಲ್ಲಿ ಗ್ಯಾರಂಟಿ ಯೋಜನೆಯಡಿ ಅಕ್ಕಿ, ರಾಗಿ ಸೇರಿದಂತೆ ಪಡಿತರ ಆಹಾರ ಧಾನ್ಯಗಳ ಪ್ರಮಾಣದ ಕುರಿತು ನಾಮಫಲಕ ಅಳವಡಿಸಬೇಕು. ಸುಳ್ಳು ದಾಖಲಾತಿಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದಿರುವವರನ್ನು ಗುರುತಿಸಲು ಅಧಿಕಾರಿಗಳು ಶ್ರಮವಹಿಸಬೇಕು ಎಂದರು.
ಸಾರಿಗೆ ಇಲಾಖೆ ಅಧಿಕಾರಿಗಳು ಪ್ರತಿ ಸಭೆಗೂ ಗೈರಾಗುತ್ತಿದ್ದಾರೆ. ಮುಂದಿನ ಸಭೆಯಲ್ಲಿ ಅವರು ಗೈರಾಗದಂತೆ ನೋಡಿಕೊಳ್ಳಬೇಕು. ಶಕ್ತಿ ಯೋಜನೆಯಡಿ ಎಷ್ಟು ಜನ ಪ್ರಯಾಣಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗುತ್ತಿಲ್ಲ ಹಾಗೂ ರೈತರಿಂದ ಹಣ ಪಡೆದು ವಿದ್ಯುತ್ ಪರಿವರ್ತಕಗಳನ್ನು ನೀಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬರುತ್ತಿದೆ. ಸಾರ್ವಜನಿಕರಿಗೆ ಯಾರೂ ಅನ್ಯಾಯ ಮಾಡಬಾರದು ಎಂದು ತಾಕೀತು ಮಾಡಿದರು.
ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಗುರುವಿನ ರಾಜು, ತಾಪಂ ಇಒ ಜಿ.ಪರಮೇಶ್ವರ, ಸಿಡಿಪಿಒ ರಾಮನಗೌಡ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net