ಬಳ್ಳಾರಿ : ಹಸಿರು ಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನ ರಾಮ್ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಗಳನ್ನು ಅದ್ಧೂರಿಯಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ಡಿಸಿ ಕೆ.ನಾಗೇಂದ್ರ ಪ್ರಸಾದ್ ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಅಂಗವಾಗಿ ಸೋಮವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಏ.05 ರಂದು ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಡಾ.ಬಾಬು ಜಗಜೀವನ ರಾಮ್ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಏ.14 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ವೇದಿಕೆ ಕಾರ್ಯಕ್ರಮ ಇಲ್ಲಿನ ಮುನ್ಸಿಪಲ್ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಬಾರಿ ವಿಜೃಂಭಣೆಗಾಗಿ ನಾನಾ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗುವುದು. ಆಯಾ ಸಮಿತಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಜಯಂತಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಜಯಂತಿ ದಿನದಂದು ಸರ್ಕಾರಿ ನೌಕರರು, ಅಧಿಕಾರಿ- ಸಿಬ್ಬಂದಿ ವರ್ಗ ಕಡ್ಡಾಯವಾಗಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಾಕೀತು ಮಾಡಿದರು.
ಜಿಲ್ಲಾ ಕೇಂದ್ರದ ಪ್ರಮುಖ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಲಂಕಾರ ಮಾಡಲಾಗುವುದು. ಈ ಇಬ್ಬರ ಮಹನೀಯರ ವಿಚಾರಧಾರೆಗಳನ್ನು ಯುವ ಸಮುದಾಯ ಮತ್ತು ಮಕ್ಕಳಿಗೆ ತಲುಪಿಸಲು ವಿಶೇಷ ಭಾಷಣಕಾರರಿಂದ ಉಪನ್ಯಾಸ ಹಾಗೂ ಶಾಲಾ-ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಲಾಗುವುದು ಎಂದರು.
ಜಯಂತಿ ದಿನದಂದು ನಾನಾ ಸಾಂಸ್ಕೃತಿಕ ಕಲಾತಂಡಗಳನ್ನೊಂಡಗಳ ಪ್ರದರ್ಶನ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಸಹಕಾರದಲ್ಲಿ ಸ್ತಬ್ಧಚಿತ್ರಗಳ ಮೆರವಣಿಗೆ ನಡೆಸಬೇಕು. ನಾನಾ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಅಭಿನಂದಿಸಲು ಸನ್ಮಾನ ಹಾಗೂ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಎರಡು ಜಯಂತಿ ದಿನದಂದು ಮೆರವಣಿಗೆ ನಡೆಯಲಿದ್ದು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ವೇದಿಕೆ ಕಾರ್ಯಕ್ರಮವರೆಗೂ ಮೆರವಣಿಗೆ ನಡೆಯಲಿದೆ. ಎಲ್ಲ ಸಂಘ-ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಮತ್ತು ಸಾರ್ವಜನಿಕರು ಒಳಗೊಂಡು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಬಳಿ ಇರುವ ಸಂವಿಧಾನ ಉದ್ಯಾನವನ ನಿರ್ವಹಣೆಗೆ ಕ್ರಮವಹಿಸಬೇಕು. ನಗರದ ಪ್ರಮುಖ ವೃತ್ತಗಳಲ್ಲಿ ಒಂದನ್ನು ಗುರುತಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿ ಸ್ಥಾಪನೆಗೆ ಕ್ರಮವಹಿಸಬೇಕು ಎಂದು ಸಮುದಾಯದ ಮುಖಂಡರು ಸಭೆಯಲ್ಲಿ ಪ್ರಸ್ತಾಪಿಸಿದರು.