ಪ್ರವಾಹ ಎದುರಿಸಲು ಸಿದ್ಧರಾಗಿ

ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ., ಮಾತನಾಡಿದರು. ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್,  ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಬ್ದುಲ್ ರೆಹಮಾನ್ ಇತರರಿದ್ದರು.
ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ., ಮಾತನಾಡಿದರು. ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಬ್ದುಲ್ ರೆಹಮಾನ್ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು
  • ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ
ಬಳ್ಳಾರಿ : ಜಿಲ್ಲೆಯಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಮಳೆಯಿಂದ ಉಂಟಾಗಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು ಎಂದು ಡಿಸಿ ನಾಗೇಂದ್ರ ಪ್ರಸಾದ್ ಕೆ. ಹೇಳಿದರು.
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಪೂರ್ವ ಮುಂಗಾರು ಮಳೆ ಹಾಗೂ ಸಂಭವನೀಯ ಕುಡಿವ ನೀರಿನ ಅಭಾವ ಎದುರಿಸಲು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಮತ್ತು ಪ್ರಕೃತಿ ವಿಕೋಪ ನಿರ್ವಹಣೆಗೆ ಸಂಬಂಧಿಸಿದಂತೆ ಆಯೋಜಿಸಿದ್ದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದರು.
ಪ್ರವಾಹ ಭೀತಿಯಿರುವ ನದಿ ತೀರದ ಗ್ರಾಮಗಳ ಕಡೆಗೆ ಅಧಿಕಾರಿಗಳು ನಿರಂತರ ನಿಗಾ ವಹಿಸಬೇಕು. ಯಾವುದೇ ಅನಾಹುತ ಸಂಭವಿಸಿದರೂ ತಕ್ಷಣವೇ ಸ್ಪಂದಿಸಬೇಕು. ಇದಲ್ಲದೇ, ಜಿಲ್ಲೆಯಲ್ಲಿ ನೈಸರ್ಗಿಕ ವಿಕೋಪ ಹಾಗೂ ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರಿಗೆ ಪರಿಹಾರ ಒದಗಿಸುವಲ್ಲಿ ವಿಳಂಬ ಧೋರಣೆ ಸಲ್ಲದು ಎಂದು ಎಚ್ಚರಿಸಿದರು. ಮೃತಪಟ್ಟ ಜಾನುವಾರಗಳ ಮಾಲೀಕರಿಗೆ ಪರಿಹಾರ ನೀಡುವ ಪ್ರಕ್ರಿಯೆಯಲ್ಲಿ ಮರಣೋತ್ತರ ಪರೀಕ್ಷೆ (ಪಿಎಂ) ವರದಿ ಪಡೆಯುವಲ್ಲಿ ವಿಳಂಬವಾಗುತ್ತಿದೆ ಎಂಬ ದೂರುಗಳಿದ್ದು, ಜಾನುವಾರುಗಳು ಮೃತಪಟ್ಟ ದಿನವೇ ಪಿಎಂ ವರದಿ ಸಿದ್ಧವಾಗಬೇಕು. ವರದಿಗಾಗಿ ದಿನಗಟ್ಟಲೆ ಕಾಯಿಸುವುದು ಸರಿಯಲ್ಲ. ವರದಿ ಬಂದ ತಕ್ಷಣವೇ ಎಸಿ ಅವರಿಂದ ಅನುಮೋದನೆ ಪಡೆದು, ತಹಸೀಲ್ದಾರ್‌ರು ವಿಳಂಬವಿಲ್ಲದೆ ಪರಿಹಾರದ ಹಣವನ್ನು ಪಾವತಿಸಬೇಕು ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಆರ್‌ಒ (ಶುದ್ಧೀಕರಣ) ಪ್ಲಾಂಟ್‌ಗಳ ವಿದ್ಯುತ್ ಬಿಲ್ ಪಾವತಿ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಗೊಂದಲಗಳನ್ನು ಶೀಘ್ರ ಇತ್ಯರ್ಥಪಡಿಸಬೇಕು. ಯಾವುದೇ ಖಾಸಗಿ ಕಂಪನಿ ಅಥವಾ ಕೈಗಾರಿಕೆಗಳು ಸಿಎಸ್‌ಆರ್‌ಯಡಿ ಹೊಸ ಆರ್‌ಒ ಪ್ಲಾಂಟ್‌ಗಳನ್ನು ಸ್ಥಾಪಿಸಬೇಕಾದರೆ ಪೂರ್ವಾನುಮತಿ ಕಡ್ಡಾಯವಾಗಿದೆ ಎಂದು ಸೂಚಿಸಿದರು.
ನಗರ ಮತ್ತು ಗ್ರಾಮೀಣ ಭಾಗದ ರಾಜಕಾಲುವೆಗಳು, ಚರಂಡಿಗಳ ಹೂಳು ತೆಗೆಯಬೇಕು. ವಿದ್ಯುತ್ ಕಂಬಗಳು ಬಿದ್ದಲ್ಲಿ ನಿಗದಿತ ಕಾಲಾವಧಿಯೊಳಗೆ ವಿದ್ಯುತ್ ಸಂಪರ್ಕ ಮರುಸ್ಥಾಪಿಸಬೇಕು. ಮುಂಗಾರು ಮಳೆಯಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಹೆಚ್ಚಿದ್ದು, ಇದಕ್ಕಾಗಿ ಸಮುದಾಯಗಳಲ್ಲಿ ಅರಿವು ಮೂಡಿಸಬೇಕು ಎಂದರು.
===
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net